ಬಾಗಲಕೋಟೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು, ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮಧ್ಯರಾತ್ರಿ 12 ಗಂಟೆಗೆ ವೇಳೆಗೆ ಅಲಗೂರು ಗ್ರಾಮದ ಬಳಿ ಶಾಲಾ ಬಸ್ ಹಾಗೂ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಅಧಿಕ ಮಕ್ಕಳು ಗಂಭೀರ ಗಾಯಗೊಂಡಿದ್ದರು. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಶಾಲಾ ಬಸ್ ಚಾಲಕ ಪೈಪೋಟಿಯಲ್ಲಿ ಬಸ್ ಚಲಾಯಿಸಲು ಹೋಗಿ ಅಪಘಾತ ಸಂಭವಿಸಿದೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.