ಮಂಗಳೂರು: ಸಂಡೆ ಬಜಾರ್ ತೆರವು ವಿರೋಧಿಸಿ 24 ಗಂಟೆಗಳ ಧರಣಿ ಸತ್ಯಾಗ್ರಹ ಅಂತ್ಯ: ಪಾಲಿಕೆಗೆ ಮುತ್ತಿಗೆ, ‘ಜೈಲ್ ಭರೋ’ ಎಚ್ಚರಿಕೆ
ಮಂಗಳೂರು: ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾನುವಾರದ ಸಂಡೆ ಬಜಾರ್ಗೆ ಮುಕ್ತ ಅವಕಾಶ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ 24 ಗಂಟೆಗಳ ಧರಣಿ ಸತ್ಯಾಗ್ರಹ, ಆಕ್ರೋಶ ಮತ್ತು ಮುತ್ತಿಗೆಯೊಂದಿಗೆ ಅಂತ್ಯಗೊಂಡಿದೆ.
ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸದ ನಗರ ಪಾಲಿಕೆ ಆಯುಕ್ತರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರಣಿ ಮುಕ್ತಾಯದ ಸಮಯ ಹತ್ತಿರವಾಗುತ್ತಿದ್ದಂತೆ, ಪಾಲಿಕೆಯ ಮುಖ್ಯ ದ್ವಾರದಿಂದ ತೆರಳಿದ ವ್ಯಾಪಾರಿಗಳು ನಗರ ಪಾಲಿಕೆಯ ಆಡಳಿತಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.
ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳು ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮಾತುಕತೆ ನಡೆಸುವ ಭರವಸೆ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.
‘ಜೈಲ್ ಭರೋ’ ಹೋರಾಟ: ಬಿ.ಕೆ. ಇಮ್ತಿಯಾಜ್ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್ ಮಾತನಾಡಿ, “ಕಳೆದ ಒಂದು ತಿಂಗಳಿನಿಂದ ಸಂಡೆ ಬಜಾರ್ ವ್ಯಾಪಾರಿಗಳು ವ್ಯಾಪಾರಕ್ಕೆ ಅವಕಾಶ ಸಿಗದೆ ಕಂಗಾಲಾಗಿದ್ದಾರೆ ಮತ್ತು ಭಾರಿ ನಷ್ಟ ಅನುಭವಿಸಿದ್ದಾರೆ. ಮುಂದಿನ ಭಾನುವಾರವೂ ವ್ಯಾಪಾರಕ್ಕೆ ಅವಕಾಶ ನೀಡದೆ ಆಯುಕ್ತರು ತೆರವು ಕಾರ್ಯಾಚರಣೆ ನಡೆಸಿದರೆ ‘ಜೈಲ್ ಭರೋ’ ಹೋರಾಟ ಹಮ್ಮಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದರು. ನಗರ ಪಾಲಿಕೆಯು ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎಂದು ಅವರು ಆಗ್ರಹಿಸಿದರು.
ಇದೇ ವೇಳೆ ಸಂಘದ ಕಾರ್ಯಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಆಯುಕ್ತರು ಕಠೋರವಾಗಿ ಮತ್ತು ಉದ್ದಟತನದಿಂದ ವರ್ತಿಸುತ್ತಿದ್ದಾರೆ. ಅವರು ಕಾನೂನುಬದ್ಧವಾಗಿ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ:
ಜಿಲ್ಲಾಧಿಕಾರಿಗಳ ಸೂಚನೆಯಂತೆ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಕೆ.ರಾಜು ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳನ್ನು ಕೂಲಂಕಷವಾಗಿ ಆಲಿಸಿದ ಅವರು, ಈ ಕುರಿತು ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಅಪರ ಜಿಲ್ಲಾಧಿಕಾರಿಗಳ ಭರವಸೆಯ ಬಳಿಕ ಧರಣಿ ಅಂತ್ಯಗೊಂಡಿತು.
ಪ್ರತಿಭಟನೆಯಲ್ಲಿ ಅಖಿಲ ಭಾರತ ವಕೀಲರ ಸಂಘದ ಅಧ್ಯಕ್ಷ ಯಶವಂತ ಮರೋಳಿ, ರೈತ ಸಂಘದ ಮುಖಂಡರಾದ ಯಾದವ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಶೇಖರ ಕುಂದರ್, ಸಿಐಟಿಯು ಮುಖಂಡರಾದ ಬಿ.ಎಂ.ಭಟ್, ಯೋಗೀಶ್ ಜಪ್ಪಿನಮೊಗರು, ಜನವಾದಿ ಮಹಿಳಾ ಸಂಘಟನೆಯ ಮುಖಂಡೆ ಯೋಗಿತಾ ಸುವರ್ಣ, ಡಿವೈಎಫ್ ಐ ಮುಖಂಡರಾದ ಸಂತೋಷ್ ಬಜಾಲ್, ತಯ್ಯುಬ್ ಬೆಂಗ್ರೆ, ಹನೀಫ್ ಬೆಂಗ್ರೆ ಹಾಗೂ ಬೀದಿಬದಿ ವ್ಯಾಪಾರಿಗಳ ಪ್ರಮುಖ ಮುಖಂಡರು ಮತ್ತು ನೂರಾರು ವ್ಯಾಪಾರಸ್ಥರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























