ಕೇಂದ್ರ ಪುರಸ್ಕೃತ ಯೋಜನೆಗಳಿಗೆ 4,195 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

siddaramaiah
14/05/2025

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಬಾಕಿ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದರು.

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50, 60:40, 70:30 ರಷ್ಟಿರುತ್ತದೆ.

ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ₹46,859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ ₹24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ ₹22,758 ಕೋಟಿಗಳಿದ್ದು ಕೇಂದ್ರದಿಂದ ₹18,561ಕೋಟಿ ಮಾತ್ರ ಬಿಡುಗಡೆ ಆಗಿದೆ. ₹4,195 ಕೋಟಿ ರೂಪಾಯಿಗಳು ಬಿಡುಗಡೆ ಆಗಿರುವುದಿಲ್ಲ ಎಂದು ತಿಳಿಸಿದರು.

ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ. 83 ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಆದ್ದರಿಂದ 2025–26 ರ ಸಾಲಿನಿಂದ ಶೇ.100 ರಷ್ಟು ಅನುದಾನವನ್ನು ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ.
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ನೀಡಲೇಬೇಕು. ಕೇಂದ್ರದ ಪಾಲು ನೀಡಲು ಪತ್ರ ಬರೆದಿದ್ದೇವೆ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version