ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಕೇಂದ್ರ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗೆ ಬಿಜೆಪಿ ಸಂಸದರಿಂದ ಅದ್ಧೂರಿ ಸ್ವಾಗತ! - Mahanayaka

ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಕೇಂದ್ರ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗೆ ಬಿಜೆಪಿ ಸಂಸದರಿಂದ ಅದ್ಧೂರಿ ಸ್ವಾಗತ!

dharmendra pradhan to parliament
27/07/2026

ನವದೆಹಲಿ:  ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಸತತ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಧರ್ಮೇಂದ್ರ ಪ್ರಧಾನ್ ಅವರು ಸೋಮವಾರ ಸಂಸತ್ತಿಗೆ ಆಗಮಿಸಿದ ವೇಳೆ, ಆಡಳಿತಾರೂಢ ಬಿಜೆಪಿ ಮತ್ತು ಎನ್‌ ಡಿಎ (NDA) ಸಂಸದರು ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಆದರೆ ಬಿಜೆಪಿ ಸಂಸದರ ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನ ಆವರಣಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿ ಸಂಸದರು “ಧರ್ಮೇಂದ್ರ ಪ್ರಧಾನ್ ಜಿಂದಾಬಾದ್” ಎಂಬ ಘೋಷಣೆಗಳನ್ನು ಕೂಗಿದರು. ಅವರಿಗೆ ಸಾಂಪ್ರದಾಯಿಕ ಟೋಪಿ ಧರಿಸಿ, ಶಾಲು ಹೊದಿಸಿ ಸ್ವಾಗತಿಸಲಾಯಿತು.

ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯ ತೀವ್ರತೆಯಿಂದಾಗಿ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಸರ್ಕಾರದೊಂದಿಗೆ ನಡೆದ ಮಾತುಕತೆಯ ನಂತರ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು.


ಧರ್ಮೇಂದ್ರ ಪ್ರಧಾನ್ ಅವರಿಗೆ ನೀಡಲಾದ ಅದ್ಧೂರಿ ಸ್ವಾಗತದ ವಿರುದ್ಧ ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳು ಜೈಲಿನಿಂದ ಹೊರಬಂದಾಗ ಅವರಿಗೆ ನೀಡಿದ ಸ್ವಾಗತದಂತೆಯೇ ಇದು ಕೂಡ ಇದೆ. ಇದು ಬಿಜೆಪಿಯ ಹಳೆಯ ಅಭ್ಯಾಸ,” ಎಂದು ಅವರು ಕಿಡಿಕಾರಿದ್ದಾರೆ.


ನೀಟ್ ಪರೀಕ್ಷಾ ಅಕ್ರಮಗಳ ವಿಷಯವಾಗಿ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತಿನ ಚಕಮಕಿ ಹಾಗೂ ಪ್ರತಿಭಟನೆ ಮುಂದುವರಿದಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ