ದೆಹಲಿಯ ಶಿಕ್ಷಣ ಕ್ರಾಂತಿಯನ್ನು ಸಹಿಸದ ಕೇಂದ್ರ ಸರ್ಕಾರದಿಂದ ಸಿಸೋದಿಯಾ ಬಂಧನ: ಪೃಥ್ವಿ ರೆಡ್ಡಿ ತೀವ್ರ ಖಂಡನೆ - Mahanayaka
12:54 PM Tuesday 28 - October 2025

ದೆಹಲಿಯ ಶಿಕ್ಷಣ ಕ್ರಾಂತಿಯನ್ನು ಸಹಿಸದ ಕೇಂದ್ರ ಸರ್ಕಾರದಿಂದ ಸಿಸೋದಿಯಾ ಬಂಧನ: ಪೃಥ್ವಿ ರೆಡ್ಡಿ ತೀವ್ರ ಖಂಡನೆ

pruthwi reddy
27/02/2023

ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್‌ ಸಿಸೋದಿಯಾ ಬಂಧನವನ್ನು ಆಮ್‌ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಖಂಡಿಸಿದ್ದು, ದೇಶಾದ್ಯಂತ ಎಎಪಿ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿಯು ಸಿಸೋದಿಯಾರವರನ್ನು ಬಂಧಿಸಿದೆ ಎಂದು ಹೇಳಿದರು.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪೃಥ್ವಿ ರೆಡ್ಡಿ, “ದೆಹಲಿಯ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ನೂತನ ಅಬಕಾರಿ ನೀತಿಯನ್ನು ದೆಹಲಿಯಲ್ಲಿ ಇನ್ನೂ ಜಾರಿಗೆ ತಂದಿಲ್ಲ ಹಾಗೂ ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು. ಸುಮಾರು ಒಂದು ವರ್ಷದಿಂದ ಕೇಂದ್ರ ಸರ್ಕಾರದ ತನಿಖಾಧಿಕಾರಿಗಳು ಸಿಸೋದಿಯಾರವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದರೂ, ಆರೋಪವನ್ನು ಸಾಬೀತುಪಡಿಸುವಂತಹ ಯಾವುದೇ ಸಣ್ಣ ಸಾಕ್ಷಿ ಸಿಕಿಲ್ಲ. ನಗದು ಅಥವಾ ಯಾವುದೇ ಅಕ್ರಮ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್‌ ಆದ್ಮಿ ಪಾರ್ಟಿಯೊಂದೇ ಬಿಜೆಪಿಯನ್ನು ಎದುರಿಸುವ ಏಕೈಕ ಶಕ್ತಿ ಎಂಬುದನ್ನು ಅರಿತಿರುವ ಬಿಜೆಪಿಯು ನಮ್ಮನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ತೊಂದರೆ ನೀಡುತ್ತಿದೆ” ಎಂದು ಹೇಳಿದರು.

“ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಮ್‌ ಆದ್ಮಿ ಪಾರ್ಟಿ ಪ್ರವರ್ಧಮಾನಕ್ಕೆ ಬರುತ್ತಿದೆ. ಜನರು ಎಎಪಿ ಪರವಾಗಿ ಇರುವುದನ್ನು ಸಹಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಚುನಾವಣೆಯ ಪ್ರಚಾರಕ್ಕೆ ಮನೀಷ್‌ ಸಿಸೋದಿಯಾ ಆಗಮಿಸಿ, ಇಲ್ಲಿನ ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಪ್ರಶ್ನಿಸಬಹುದು ಎಂಬ ಭಯದಿಂದ ಕೇಂದ್ರ ಸರ್ಕಾರವು ಸಿಬಿಐ ಮೂಲಕ ಅವರನ್ನು ಬಂಧಿಸಿದೆ. ದೇಶ ಹಾಗೂ ಜನರಿಗೋಸ್ಕರ ಕೇವಲ ಬಂಧನ ಮಾತ್ರವಲ್ಲ, ಪ್ರಾಣ ನೀಡಲೂ ನಾವುಗಳು ಸಿದ್ಧವಿದ್ದೇವೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.

“ಆಮ್‌ ಆದ್ಮಿ ಪಾರ್ಟಿಯ ದೆಹಲಿ ಸರ್ಕಾರದ ಶಿಕ್ಷಣ ಕ್ರಾಂತಿಯನ್ನು ಕಂಡು ಅನೇಕ ವಿದೇಶಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿವೆ. ಆದರೆ ಬಿಜೆಪಿಗೆ ಮಾತ್ರ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಸಚಿವರಾಗಿ ಮನೀಷ್‌ ಸಿಸೋದಿಯಾರವರು ಬರೋಬ್ಬರಿ 25,000ಕ್ಕೂ ಶಾಲಾ ಕೊಠಡಿಗಳನ್ನು ಅತ್ಯಾಧುನಿಕವಾಗಿ ನಿರ್ಮಿಸಿ, ಸುಮಾರು 20 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಇಂತಹವರ ವಿರುದ್ಧ ಬಿಜೆಪಿಯು ಈ ರೀತಿ ಕೀಳುಮಟ್ಟದ ಕುತಂತ್ರ ಮಾಡುತ್ತಿರುವುದು ಖಂಡನೀಯ. ಗಿಡವು ಚಿವುಟಿದಷ್ಟೂ ಚಿಗುರುವಂತೆ ಆಮ್‌ ಆದ್ಮಿ ಪಾರ್ಟಿ ಕೂಡ ಬಿಜೆಪಿ ತೊಂದರೆ ನೀಡಿದಷ್ಟೂ ಹೆಚ್ಚಿನ ವೇಗದಲ್ಲಿ ಬೆಳೆಯಲಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ