ಸೌಹಾರ್ದ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರಕಾರ ಹೆಚ್ಚಿನ ಮಹತ್ವ ನೀಡಲಿದೆ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡುವ, ಸೌಹಾರ್ದ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಸಮಾಜದಲ್ಲಿ ಹದಗೆಟ್ಟಿದ್ದ ಸಾಮರಸ್ಯದ ವಾತಾವರಣವನ್ನು ಮರುನಿರ್ಮಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ 77ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಕೋಮು ಸಂಘರ್ಷಕ್ಕೆ ಕಾರಣವಾಗುವ ಜಾತಿ ಧರ್ಮ ಇವುಗಳನ್ನು ಮೀರಿ ನಿಂತು, ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ದೇಶಪ್ರೇಮವನ್ನು ಮೈಗೂಡಿಸಿಕೊಳ್ಳಬೇಕಿದೆ. ಹಾಗಾದಾಗ ಮಾತ್ರ ಭಾರತ ಸ್ವಾತಂತ್ರ್ಯದ 76 ವರ್ಷಗಳ ಕಾಲಘಟ್ಟದಲ್ಲಿ ಸಾರ್ಥಕತೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.
ಸಮಾಜದಲ್ಲಿ ಎಲ್ಲಾ ಧರ್ಮೀಯರು ಸಹೋದರರಂತೆ ಸಾಮರಸ್ಯದ ಶಾಂತಿಯುತ ಬದುಕನ್ನು ಸಾಗಿಸಲು ನಾವು ಪ್ರಯತ್ನಿಸಬೇಕು. ಶಾಂತಿ ನೆಮ್ಮದಿಗೆ ಭಂಗ ತರುವಂತಹ ಯಾವುದೇ ಕೆಟ್ಟ ಶಕ್ತಿಗಳನ್ನು, ಪ್ರಯತ್ನಗಳನ್ನು ವಿಫಲಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.
ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟ 5 ಗ್ಯಾರಂಟಿಗಳ ಭರವಸೆಯನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಮೊದಲಿಗೆ ಜಾರಿಗೆ ತಂದ, ರಾಜ್ಯದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುವ ಶಕ್ತಿ ಯೋಜನೆ ಮೂಲಕ ಮಹಿಳೆಯರು ರಾಜ್ಯಾದ್ಯಂತ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಯೋಜನೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಇದುವರೆಗೆ ರಾಜ್ಯದ 30ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 11,14,487 ಮಹಿಳೆಯರು ಪ್ರಯಾಣ ಮಾಡಿದ್ದು 4.10 ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಹಸಿವು ಮುಕ್ತ ಕರ್ನಾಟಕದ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 44.80 ಲಕ್ಷ ಅಂತ್ಯೋದಯ ಹಾಗೂ 3.97 ಕೋಟಿ ಆದ್ಯತಾ ಪಡಿತರ ಚೀಟಿದಾರರಿಗೆ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಆಹಾರ ಧಾನ್ಯ ವಿತರಿಸಲು ನಿರ್ಧರಿಸಿದ್ದು, ಇದಕ್ಕಾಗಿ ಪ್ರಸಕ್ತ ವರ್ಷದ ಬಜೆಟ್ ನಲ್ಲಿ 10 ಸಾವಿರ ಕೋಟಿ ರೂ. ನಿಗಧಿಪಡಿಸಲಾಗಿದೆ ಎಂದು ಅವರು ಹೇಳಿದರು.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಅಂತ್ಯೋದಯ 28,434 ಹಾಗೂ 1,51,206 ಆದ್ಯತಾ ಪಡಿತರ ಚೀಟಿ ಇದ್ದು, 6,83,090 ಸದಸ್ಯರಿಗೆ ಲಾಭ ಸಿಗಲಿದೆ. ಹಾಲಿ ಅಂತ್ಯೋದಯ ಕಾರ್ಡಿಗೆ 35 ಕೆಜಿ ಅಕ್ಕಿ ಹಾಗೂ ಆದ್ಯತಾಪಡಿತರ ಚೀಟಿ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ವಿತರಿಸುತ್ತಿದ್ದು, ಇದರ ಜೊತೆಗೆ ನೇರ ನಗದು ವರ್ಗಾವಣೆಯಡಿ ಜಿಲ್ಲೆಯ ಫಲಾನುಭವಿಗಳಿಗೆ 11.29 ಕೋಟಿ ಅನುದಾನವನ್ನು ರಾಜ್ಯ ಸರ್ಕಾರದಿಂದ ಪಾವತಿಸಲಾಗಿದೆ.ಗೃಹಲಕ್ಷಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂಪಾಯಿಗಳನ್ನು, ವಾರ್ಷಿಕ 24 ಸಾವಿರ ರೂ.ಗಳನ್ನು ವರ್ಗಾಯಿಸಲಾಗು ವುದು. ಈ ಯೋಜನೆಗಾಗಿ ವಾರ್ಷಿಕ ಸುಮಾರು 36,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ. ಈಗಾಗಲೇ ರಾಜ್ಯದಲ್ಲಿ 1.07 ಕೋಟಿ ಮಹಿಳೆಯರು ಆನ್ಲೈನ್ಮೂಲಕ ನೋಂದಾಯಿಸಿದ್ದಾರೆ. ಉಡುಪಿ ಜಿಲ್ಲೆಯ ಅರ್ಹ 2,56,850 ಕುಟುಂಬಗಳ ಪೈಕಿ ಇದುವರೆಗೆ 2 ಲಕ್ಷಕ್ಕಿಂತ ಹೆಚ್ಚು ನೋಂದಣಿ ಮಾಡಿಕೊಂಡಿದ್ದು ಶೇಕಡ 73 ಕ್ಕಿಂತ ಹೆಚ್ಚು ಸಾಧನೆ ಆಗಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಈಗಾಗಲೇ ಅನುಷ್ಠಾನವಾಗಿದ್ದು, ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್ತಿನ ಬಿಲ್ಲಿಗೆ ಇದು ಅನ್ವಯವಾಗಿದೆ. ವಿದ್ಯುಚ್ಛಕ್ತಿಯ ಸದ್ಬಳಕೆಯ ಕುರಿತು ಜನರಲ್ಲಿ ಜಾಗೃತಿ ಇರಬೇಕೆಂಬ ಜವಾಬ್ದಾರಿಯೊಂದಿಗೆ ಈ ಯೋಜನೆಯ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಉಚಿತ ವಿದ್ಯುತ್ ಸೌಲಭ್ಯದಿಂದ ಜನರ ಮನೆ -ಮನಗಳಲ್ಲಿ ನೆಮ್ಮದಿಯ ಬೆಳಕು ತುಂಬುವ ಪ್ರಯತ್ನ ನಮ್ಮ ಸರ್ಕಾರದ್ದಾಗಿದೆ. ಗೃಹಜ್ಯೋತಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿನ 3,15,692 ಅರ್ಹ ವಿದ್ಯುತ್ ಬಳಕೆಯ ಗ್ರಾಹಕರಲ್ಲಿ ಇದುವರೆಗೆ 2,56,549 ಮಂದಿಗೆ ಉಚಿತ ಬಿಲ್ನ ದೃಢೀಕರಣ ನೀಡಲಾಗಿದ್ದು, ಯೋಜನೆಯ ನೊಂದಣಿ ಕೊನೆಯ ದಿನಾಂಕ ಇರುವುದಿಲ್ಲ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಶಿಕ್ಷಣ ಪಡೆದು ಉದ್ಯೋಗ ಹಿಡಿದು ಜೀವನದಲ್ಲಿ ಉನ್ನತಿಯನ್ನು ಸಾಧಿಸುವ ಕನಸು ಹೊಂದಿರುವ ಯುವ ಜನರು, ನಿರೀಕ್ಷೆಯಂತೆ ಉದ್ಯೋಗ ಪಡೆಯಲು ಸಾಧ್ಯವಾಗದ ಸಂದರ್ಭದಲ್ಲಿ ಅವರಿಗೆ ಬೆನ್ನೆಲುಬಾಗಿ ನಿಲ್ಲುವ ಆಶಯದೊಂದಿಗೆ ನಮ್ಮ ಪ್ರಣಾಳಿಕೆಯ ಐದನೇ ಗ್ಯಾರಂಟಿ ಯೋಜನೆಯಾದ ಪದವೀಧರರು ಮತ್ತು ಡಿಪ್ರೋ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂಪಾಯಿಗಳನ್ನು ಹಾಗೂ ಡಿಪ್ರೋ ನಿರುದ್ಯೋಗಿಗಳಿಗೆ ಮಾಸಿಕ 1500 ರೂಪಾಯಿಗಳನ್ನು ನೀಡಲಾಗುವುದು.
ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನ ಮಾನ್ಯ ಮುಖ್ಯಮಂತ್ರಿಯವರು ಈಗಾಗಲೇ ತೋರ್ಪಡಿಸಿದ್ದಾರೆ. 35,410 ಕೋಟಿ ರೂ ಗಳನ್ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ 2023-24 ರ ಬಜೆಟ್ ನಲ್ಲಿ ಮೀಸಲಿಟ್ಟಿರುವುದೇ ಇದಕ್ಕೆ ಸಾಕ್ಷಿ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿನ ಆಸಿಡ್ ದಾಳಿ ಸಂತ್ರಸ್ಥರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂಪಾಯಿಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂಪಾಯಿ ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು ಎಂದರು.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯ ಪಡೆಯನ್ನು ರಚಿಸಲಾಗುತ್ತಿದೆ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯನ್ನು ತಯಾರಿಸಲಾಗುವುದು. ಜಿಲ್ಲೆಯಲ್ಲಿ 2022-23 ರಲ್ಲಿ 2063 ಕೋಟಿ ರೂ ಮೌಲ್ಯದ 2,65,528 ಮೆಟ್ರಿಕ್ ಟನ್ ಮೀನು ಉತ್ಪಾದನೆ ಆಗಿದೆ. ರಾಜ್ಯದಲ್ಲಿ ಜಿಲ್ಲೆಯು 2 ನೇ ಸ್ಥಾನದಲ್ಲಿದೆ. ಮೀನುಗಾರಿಕೆ ಜಿಲ್ಲೆಯ ಪ್ರಮುಖ ಉದ್ಯಮವಾಗಿದ್ದು ಇದರ ಸರ್ವತೋಮುಖ ಅಭಿವೃಧ್ದಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಹೆಬ್ರಿ ತಾಲೂಕಿನ ಕೆರೆಬೆಟ್ಟು ಮತ್ತು ಶಿವಪುರ ಗ್ರಾಮಗಳಲ್ಲಿ 113.59 ಎಕ್ರೆ, ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ 50.42 ಎಕ್ರೆ ಜಮೀನನ್ನು ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಭೂ ಸ್ವಾಧೀನಪಡಿಸಕೊಳ್ಳಲಾಗಿದ್ದು, ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ 100 ಎಕ್ರೆ, ಕಾಪು ತಾಲೂಕಿನ ಎಲ್ಲೂರು ಹಾಗೂ ಸಾಂತೂರು ಗ್ರಾಮದಲ್ಲಿ ಒಟ್ಟು 941.98 ಎಕ್ರೆ ಜಮೀನಿನ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಈ ಪ್ರದೇಶದಲ್ಲಿ ಶೀಘ್ರದಲ್ಲಿಯೇ ಹೊಸ ಕೈಗಾರಿಕ ಪ್ರದೇಶವನ್ನು ಸ್ಥಾಪಿಸಲಾಗುವುದು ಎಂದರು.
ಪ್ರಸ್ತುತ ಸಾಲಿನ ಮುಂಗಾರು ಮಳೆಯ ಅವಧಿಯಲ್ಲಿ ಉಂಟಾಗಿರುವ ಹಾನಿಗಳಿಗೆ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ಮಾರ್ಗ ಸೂಚಿಯಂತೆ ಒಟ್ಟು 93.72 ಲಕ್ಷ ರೂ. ತುರ್ತು ಪರಿಹಾರವನ್ನು ಪಾವತಿಸಲಾಗಿದೆ. ಹೆಚ್ಚುವರಿಯಾಗಿ ಮನೆ ಹಾನಿ ಪ್ರಕರಣಗಳಿಗೆ, ಮನೆಯನ್ನು ಹೊಸದಾಗಿ ನಿರ್ಮಿಸಲು 5 ಲಕ್ಷ ಹಾಗೂ ದುರಸ್ಥಿ ಮಾಡಿಕೊಳ್ಳಲು 3 ಲಕ್ಷ ರೂ ಪರಿಹಾರವನ್ನು ನೀಡಲು ಮಂಜೂರಾತಿ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಪಂ ಸಿಇಓ ಪ್ರಸನ್ನ ಎಚ್., ಎಸ್ಪಿ ಅಕ್ಷಯ್ ಹಾಕೇ ಮೊದಲಾದವರು ಉಪಸ್ಥಿತರಿದ್ದರು