ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕನ ಉಚ್ಛಾಟನೆ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ರಾಮದುಲಾರ್ ಗೊಂಡ್ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ.
ಗೊಂಡ್ ಅವರು ಸೋನ್ಭದ್ರ ಜಿಲ್ಲೆಯ ದುದ್ಧಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. 2014ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗೊಂಡ್ ಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಸೋನ್ಭದ್ರದ ಎಂಪಿ-ಎಂಎಲ್ಎ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಹ್ಸಾನ್ ಉಲ್ಲಾ ಖಾನ್ ಅವರು ತೀರ್ಪು ಪ್ರಕಟಿಸಿದ್ದು, ಗೊಂಡ್ಗೆ 10 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ.
ಈ ಮೊತ್ತವನ್ನು ಅತ್ಯಾಚಾರ ಸಂತ್ರಸ್ತೆಗೆ ನೀಡಲಾಗುವುದು ಎಂದು ನ್ಯಾಯಾಧೀಶರು ಹೇಳಿದರು. ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತ್ರಸ್ತೆಯ ಕುಟುಂಬ ತೃಪ್ತಿ ವ್ಯಕ್ತಪಡಿಸಿದೆ.
ಅತ್ಯಾಚಾರ ಸಂತ್ರಸ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ಗೊಂಡ್ ವಿರುದ್ಧ ಸೆಕ್ಷನ್ 376 (ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.