ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ: ಇಬ್ಬರು ಅಧಿಕಾರಿಗಳ ಅಮಾನತು

ತುಮಕೂರು: ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ
ಈ ಹಿನ್ನೆಲೆಯಲ್ಲಿ ತುಮಕೂರಿನ ಸಮಾಜ ಕಲ್ಯಾಣ ಇಲಾಖೆ ಗ್ರೇಡ್ ಒನ್ ಸಹಾಯಕ ನಿರ್ದೇಶಕ ಶಿವಣ್ಣ ಹಾಗೂ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ವಿದ್ಯಾರ್ಥಿ ನಿಲಯದಲ್ಲಿದ್ದ ಈ ಬಾಲಕಿಯು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ನಾಲ್ಕೈದು ದಿನಗಳಿಂದ ಶಾಲೆಗೆ ಗೈರು ಹಾಜರು ಆಗಿದ್ದಳು.
ಹೊಟ್ಟೆ ನೋವು ಕಾಣಿಸಿಕೊಂಡ ಆಕೆಯನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಕ್ರಮ ಕೈಗೊಂಡಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
ಬಾಲಕಿಯ ದೇಹದಲ್ಲಿ ಯಾವುದೇ ಅನುಮಾನ ಮೂಡುವಂತಿರಲಿಲ್ಲ. ಆಕೆ ಬೇರೆಯವರ ಜೊತೆ ಸಂಪರ್ಕದಲ್ಲಿರುವುದು ಕೂಡ ಗಮನಕ್ಕೆ ಬಂದರ್ಲಿಲ್ಲ ಎಂದು ವಾರ್ಡನ್ ನಿವೇದಿತ ಅವರು ಅಧಿಕಾರಿಗಳ ಬಳಿ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಈ ಸಂಬಂಧ ಫೋಕ್ಸು ಪ್ರಕರಣದ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.