ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ - Mahanayaka
12:11 AM Saturday 23 - August 2025

ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

k s eshwarappa
14/04/2024


Provided by

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (Shivamogga Lok Sabha Constituency) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಡಿಸಿಎಂ, ಬಿಜೆಪಿ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ (BJP Rebel Leader KS Eshwarappa) ಅವರು ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಈಶ್ವರಪ್ಪ, ನನ್ನ ಹೋರಾಟ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾತ್ರ ಎಂದಿದ್ದಾರೆ. ನಾಮಪತ್ರ ಹಿಂಪಡೆಯುವ ಬಗ್ಗೆ ಕೆಲವು ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಹಿಂದೆ ನಿಂತವರಿಗೆ ನಾನು ಎಂದಿಗೂ ದ್ರೋಹ ಮಾಡುವುದಿಲ್ಲ. ನಾನು ನಾಮಪತ್ರ ಹಿಂತೆಗೆದುಕೊಂಡಿದ್ದೇನೆ ಎಂಬ ವರದಿಗಳು ನಿಜವಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನನಗೆ ಈಗಾಗಲೇ ಶಿವಮೊಗ್ಗದ ಜನರಿಂದ ಸಾಕಷ್ಟು ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ್ದ ಕೆಎಸ್‌ಇ, ಶಿವಮೊಗ್ಗದಲ್ಲಿ ಗೆದ್ದು ಪ್ರಧಾನಿ ಮೋದಿ ಬಳಿಗೆ ಹೋಗುತ್ತೇನೆ. ಈಗ ನೇರ ಸ್ಪರ್ಧೆ ನಡೆಯಲಿದೆ. ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ನನ್ನೊಂದಿಗೆ ಇದ್ದಾರೆ. ಜನರೂ ನನ್ನೊಂದಿಗಿದ್ದಾರೆ. ನಾನು ಗೆದ್ದರೆ ಪ್ರಧಾನಿ ನರೇಂದ್ರ ಮೋದಿಯವರ ಬಳಿಗೆ ಹೋಗುತ್ತೇನೆ” ಎಂದಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಕುಟುಂಬದವರ ವಿರುದ್ಧ ಹೋರಾಟ:

ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಈಶ್ವರಪ್ಪ ಬಂಡಾಯ ಎದ್ದಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.  ಹೀಗಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಇಬ್ಬರು ಪುತ್ರರಾದ ಬಿ.ವೈ ರಾಘವೇಂದ್ರ ಮತ್ತು ಬಿ.ವೈ ವಿಜಯೇಂದ್ರ ಅವರು ತಮ್ಮ ಮಗನಿಗೆ ಸ್ಪರ್ಧಿಸಲು ಅವಕಾಶ ನೀಡದಿರುವುದಕ್ಕೆ ಕಾರಣ ಎಂದು ಈಶ್ವರಪ್ಪ ಆರೋಪಿಸಿದ್ದರು.

ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನ ಮೇ 7 ರಂದು ನಡೆಯಲಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್ 12 ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ವಾಪಸ್ ಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ