ಶಾಸಕರಿಂದ ಒತ್ತಡ: ಪಿಎಸ್ ಐ ಹೃದಯಾಘಾತದಿಂದ ಸಾವು
ಯಾದಗಿರಿ: ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದಾರೆ.
ಇತ್ತೀಚೆಗೆ ಸೈಬರ್ ಕ್ರೈಂ ಪಿಎಸ್ಐ ಆಗಿ ಇವರು ವರ್ಗಾವಣೆಯಾಗಿದ್ದರು. ಹೀಗಾಗಿ ನಗರ ಠಾಣೆಯಲ್ಲಿ ಅವರನ್ನು ಸಿಬ್ಬಂದಿ ಬೀಳ್ಕೊಟ್ಟಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್ ನಿವಾಸದಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಒತ್ತಡ?
ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪರಶುರಾಮ್ ಅವರ ಗರ್ಭಿಣಿ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಪರಶುರಾಮ್ ಅವರ ಪತ್ನಿ ಶ್ವೇತಾ ಆರೋಪಿಸಿದ್ದಾರೆ.
ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ವಿರುದ್ಧ ದೂರು ಪಿಎಸ್ ಐ ಪತ್ನಿ ಶ್ವೇತಾ ಯಾದಗಿರಿ ಎಸ್ಪಿ ಸಂಗೀತಾ ಅವರಿಗೆ ದೂರು ನೀಡಿದ್ದಾರೆ.
ಇದು ಲೂಟಿ ಸರ್ಕಾರ್: ಆರ್.ಅಶೋಕ್
ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್ ಐ ಪರಶುರಾಮ್ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್ ಅವರ ಸಾವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























