ಆಕೆಯೇನು ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ? | ಸಿಡಿ ವಿಚಾರವಾಗಿ ಸಿದ್ದರಾಮಯ್ಯ ಗರಂ - Mahanayaka

ಆಕೆಯೇನು ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ? | ಸಿಡಿ ವಿಚಾರವಾಗಿ ಸಿದ್ದರಾಮಯ್ಯ ಗರಂ

siddaramaiha
28/03/2021


Provided by

ಬೆಂಗಳೂರು:  ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಡಿಯಲ್ಲಿರುವ ಯುವತಿಯ ಪತ್ತೆಯ ಕುರಿತು ಪ್ರಸ್ತಾಪಿಸಿ,  ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂದು ಪ್ರಶ್ನಿಸಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಗಮನಹರಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ