ಗಣೇಶೋತ್ಸವ ಮೆರವಣಿಗೆ ಮೇಲೆ ಹರಿದ ಟ್ರಕ್: ಸಾವಿನ ಸಂಖ್ಯೆ 9ಕ್ಕೆ ಏರಿಕೆ, ಅಪಘಾತಕ್ಕೆ ಕಾರಣ ಏನು? - Mahanayaka
11:29 AM Saturday 13 - September 2025

ಗಣೇಶೋತ್ಸವ ಮೆರವಣಿಗೆ ಮೇಲೆ ಹರಿದ ಟ್ರಕ್: ಸಾವಿನ ಸಂಖ್ಯೆ 9ಕ್ಕೆ ಏರಿಕೆ, ಅಪಘಾತಕ್ಕೆ ಕಾರಣ ಏನು?

hassan accident
13/09/2025

ಹಾಸನ: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.


Provided by

ಘಟನೆಯಲ್ಲಿ 17ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಬಳ್ಳಾರಿ ನಿವಾಸಿ ಅಂತಿಮ ಬಿಇ ವಿದ್ಯಾರ್ಥಿ ಪ್ರವೀಣ್​​​​​, ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿ ಕೆ.ಬಿ.ಪಾಳ್ಯ ನಿವಾಸಿ ರಾಜೇಶ್​(17), ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ(17), ಮುತ್ತಿಗೆಹೀರಳ್ಳಿ ಗ್ರಾಮದ ನಿವಾಸಿ ಗೋಕುಲ್(17), ಕಬ್ಬಿನಹಳ್ಳಿ ನಿವಾಸಿಗಳಾದ ಕುಮಾರ(25), ಪ್ರವೀಣ(25), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಗವಿ ಗಂಗಾಪುರ ಗ್ರಾಮ ನಿವಾಸಿ ಮಿಥುನ್(23), ಚಿಕ್ಕಮಗಳೂರು ಜಿಲ್ಲೆಯ ಮಾಣೇನಹಳ್ಳಿ ನಿವಾಸಿ ಬಿಇ ವಿದ್ಯಾರ್ಥಿ ಸುರೇಶ್(19), ಹಾಸನ ತಾಲೂಕಿನ ಬಂಟರಹಳ್ಳಿ ಗ್ರಾಮದ ನಿವಾಸಿ ಪ್ರಭಾಕರ್(55) ಮೃತ ದುರ್ದೈವಿಗಳು.

ದುರಂತದ ಬಗ್ಗೆ ದಕ್ಷಿಣ ವಲಯ IGP ಬೋರಲಿಂಗಯ್ಯ ಹೇಳಿಕೆ ನೀಡಿದ್ದು, ಘಟನೆಯಲ್ಲಿ ಇಲ್ಲಿಯವರೆಗೆ 9 ಜನರು ಮೃತಪಟ್ಟಿದ್ದಾರೆ. ಈ ಪೈಕಿ ‌6 ಜನ ಸ್ಥಳೀಯರು ಮತ್ತು ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗದ ಮೂವರು ವಿದ್ಯಾರ್ಥಿಗಳು. 17 ಜನರಿಗೆ ಗಾಯವಾಗಿದೆ, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ಗಾಯಗೊಂಡವರ ಕುರಿತು ಮಾಹಿತಿ ಪಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಸದ್ಯ ಘಟನೆಯಲ್ಲಿ ಗಾಯಗೊಂಡ ಬಹುತೇಕರು ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

8ಗಂಟೆ 30 ನಿಮಿಷದ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಗಣೇಶ ಮೆರವಣಿಗೆ ಹೊರಟಿತ್ತು. ಹೆದ್ದಾರಿಯ ಒಂದು ಬದಿ ಬಂದ್‌ ಮಾಡಿದ್ದರಿಂದ ಮತ್ತೊಂದು ಬದಿಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ವಾಹನಗಳು ನುಗ್ಗದಂತೆ ರಸ್ತೆ ಮಧ್ಯೆ ಬ್ಯಾರಿಕೇಡ್‌ ಗಳನ್ನೂ ಹಾಕಲಾಗಿತ್ತು. ಇದೇ ವೇಳೆಗೆ ಹಾಸನದಿಂದ ಹೊಳೆನರಸೀಪುರಕ್ಕೆ ಹೊರಟಿದ್ದ ಟ್ರಕ್‌, ಬೈಕ್‌ ಒಂದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ಗಣೇಶ ಮೆರವಣಿಗೆಯತ್ತ ನುಗ್ಗಿದೆ. ಏಕಾಏಕಿ ಮೆರವಣಿಗೆ ಮೇಲೆ ಹರಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ