ಚಿಕ್ಕಮಗಳೂರು: ಜಿಲ್ಲಾಸ್ಪತ್ರೆ ಆವರಣದಲ್ಲೇ ಹೊತ್ತಿ ಉರಿದ ಕಾರು; ರೋಗಿ ಸೇರಿ ಪ್ರಯಾಣಿಕರು ಪಾರು!
ಚಿಕ್ಕಮಗಳೂರು: ಕಾಫಿನಾಡಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಇಂದು ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ರೋಗಿಯೊಬ್ಬರನ್ನು ಚಿಕಿತ್ಸೆಗಾಗಿ ಕರೆತರುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು, ಕಾರಿನ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಜಿಲ್ಲಾಸ್ಪತ್ರೆಗೆ ರೋಗಿಯೊಬ್ಬರನ್ನು ಕರೆತರುತ್ತಿದ್ದ ಸಂದರ್ಭದಲ್ಲಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಆಸ್ಪತ್ರೆಯ ಮುಂಭಾಗದಲ್ಲೇ ಕಾರು ಧಗಧಗನೆ ಹೊತ್ತಿ ಉರಿಯಲಾರಂಭಿಸಿತು.
ಸಮಯಪ್ರಜ್ಞೆ ಮೆರೆದ ಆಂಬುಲೆನ್ಸ್ ಚಾಲಕರು:
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರು, ಕಾರಿನಲ್ಲಿದ್ದ ರೋಗಿ ಹಾಗೂ ಇತರ ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಿದ್ದಾರೆ. ಇದರಿಂದಾಗಿ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ತಪ್ಪಿದಂತಾಗಿದೆ.
ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯಾಚರಣೆ:
ಬೆಂಕಿಯ ತೀವ್ರತೆ ಹೆಚ್ಚಾದಾಗ ಸ್ಥಳೀಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಲಭ್ಯವಿದ್ದ ನೀರು ಮತ್ತು ಆಕ್ಸಿಜನ್ ಸಿಲಿಂಡರ್‌ಗಳನ್ನು ಬಳಸಿಕೊಂಡು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು. ಅಂತಿಮವಾಗಿ ಬೆಂಕಿ ನಿಯಂತ್ರಣಕ್ಕೆ ಬಂದರೂ, ಕಾರಿನ ಮುಂಭಾಗದ ಇಂಜಿನ್ ಭಾಗ ಸಂಪೂರ್ಣ ಸುಟ್ಟು ಹಾನಿಯಾಗಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























