ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಭಾಗ್ಯವಂತಿ ಮಠದ ಪೂಜಾರಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಸಕ್ರ್ಯ ನಾಯಕ ತಾಂಡಾದಲ್ಲಿರುವ ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ಎಂಬುವವರ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಆರೋಪಿ ಅಣ್ಣಪ್ಪ ರೈಟರ್ ನಿಂದ ಸಂತ್ರಸ್ತ ಬಾಲಕಿ ಹಾಗೂ ಆಕೆಯ ತಂಗಿಯನ್ನು ಆಗಸ್ಟ್ 18ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಅಕ್ಕ ಪಡೆ ಸಿಬ್ಬಂದಿ ರಕ್ಷಿಸಿ ಕರೆತಂದಿದ್ದರು.
ನಂತರ ಅವರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿತ್ತು. ಆಗಸ್ಟ್ 20ರಂದು ನಡೆದ ಆಪ್ತ ಸಮಾಲೋಚನೆ ವೇಳೆ, ಬಾಲಕಿಯು ತನಗೆ ನಡೆದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಬಾಲಕಿಯ ತಾಯಿ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದಾಗ, ತನ್ನ ಮಗಳನ್ನು ಸಂಬಂಧಿಕರ ಬಳಿ ಬಿಟ್ಟು ಬಂದಿದ್ದರು. ಅಲ್ಲಿಂದ ಬಾಲಕಿಯನ್ನು ಭಾಗ್ಯವಂತಿ ಮಠದ ಪೂಜಾರಿ ಅಣ್ಣಪ್ಪ ರೈಟರ್ ಅವರ ವಶಕ್ಕೆ ಒಪ್ಪಿಸಲಾಗಿತ್ತು. ಈ ವೇಳೆ ಆರೋಪಿಯು ಲೈಂಗಿಕ ದುರುದ್ದೇಶದಿಂದ ಅಸಹ್ಯವಾಗಿ ವರ್ತಿಸುತ್ತಿದ್ದನು ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 8 ಮತ್ತು 10ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಮುಂದುವರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























