ತುಂಗಾ ನದಿಯಲ್ಲಿ ಈಜಲು ಹೋಗಿ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ದಾರುಣ ಸಾವು
ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಶೃಂಗೇರಿಯಲ್ಲಿ ದಾರುಣ ಘಟನೆಯೊಂದು ಸಂಭವಿಸಿದ್ದು, ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ದುರ್ದೈವಿ ಯುವಕನನ್ನು ಬೆಂಗಳೂರು ಮೂಲದ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ದರ್ಶನ್ ಎಂದು ಗುರುತಿಸಲಾಗಿದೆ.
ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ಹರಿಯುವ ತುಂಗಾ ನದಿಯ ದಂಡೆಗೆ ನಾಲ್ವರು ಯುವಕರ ತಂಡ ಸ್ನಾನಕ್ಕಾಗಿ ನೀರಿಗಿಳಿದಿತ್ತು. ನದಿಯ ನೀರಿನ ಆಳ ಹಾಗೂ ಸೆಳೆತದ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಅಥವಾ ಸರಿಯಾದ ಅರಿವಿಲ್ಲದ ಕಾರಣ ದರ್ಶನ್ ದಿಢೀರನೆ ನೀರಿನ ಆಳಕ್ಕೆ ಸಿಲುಕಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ, ಜೊತೆಯಲ್ಲಿದ್ದ ಉಳಿದ ಮೂವರು ಸ್ನೇಹಿತರು ಪ್ರಾಣಾಪಾಯದಿಂದ ಪಾರಾಗಿ ಸುರಕ್ಷಿತವಾಗಿ ದಡಕ್ಕೆ ವಾಪಸ್ ಬಂದಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಶೃಂಗೇರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ನೀರಿನಲ್ಲಿ ಮುಳುಗಿರುವ ದರ್ಶನ್ ಶವಕ್ಕಾಗಿ ತೀವ್ರ ಶೋಧ ಕಾರ್ಯವನ್ನು ಮುಂದುವರಿಸಲಾಗಿದೆ.
ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




























