ಊರಿಗೊಂದು ಕ್ಯಾಬಿನೆಟ್ ಮಾಡುವುದು ಅದೇನು ಟೂರಿಂಗ್ ಟಾಕೀಸಾ?: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಿಂದ ಹೊರಗೆ ವಿವಿಧ ಜಿಲ್ಲೆಗಳಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿರುವುದನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದು, ಇದು ಕೇವಲ ಪ್ರಚಾರದ ಸ್ಟಂಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಜೆ.ಪಿ. ಭವನದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಕೆಂಗಲ್ ಹನುಮಂತಯ್ಯನವರು ವ್ಯವಸ್ಥಿತ ಕಟ್ಟಡ ನಿರ್ಮಿಸಿದ್ದರು. ಆದರೆ ಈಗಿನ ಸರ್ಕಾರ ಜಿಲ್ಲೆಗಳಿಗೆ ದಂಡು ದಂಡಾಗಿ ಹೋಗಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ. ಊರಿಗೊಂದು ಕ್ಯಾಬಿನೆಟ್ ಮಾಡಲು ಅದೇನು ಟೂರಿಂಗ್ ಟಾಕೀಸಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ರಾಜ್ಯದ ಬೊಕ್ಕಸಕ್ಕೆ ಈಗಾಗಲೇ ಭಾರ ಹೆಚ್ಚಾಗಿದ್ದು, ಸರ್ಕಾರದ ಇಂತಹ ಪ್ರವಾಸಗಳು ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುತ್ತಿವೆ ಹೊರತು ಜನರಿಗೆ ಇದರಿಂದ ಯಾವುದೇ ರೀತಿಯ ಪ್ರಯೋಜನವಾಗುತ್ತಿಲ್ಲ ಎಂದು ಸಚಿವರು ದೂರಿದರು. ಹೊರಗಡೆ ಸಂಪುಟ ಸಭೆಗಳ ಹೆಸರಿನಲ್ಲಿ ದುಂದುವೆಚ್ಚ ಮಾಡುವ ಬದಲು, ಆ ಹಣವನ್ನು ಸಂಕಷ್ಟದಲ್ಲಿರುವ ರೈತರಿಗೆ ನೀಡಿದ್ದರೆ ಅವರಿಗೆ ನೆರವಾಗುತ್ತಿತ್ತು ಎಂದರು.
ರಾಜ್ಯದಲ್ಲಿ ಪ್ರಸ್ತುತ ಬರಗಾಲದ ವಾತಾವರಣವಿದ್ದು, ಜನ ಹಾಗೂ ಜಾನುವಾರುಗಳಿಗೆ ನೀರು ಮತ್ತು ಮೇವಿನ ಅಭಾವ ತಲೆದೋರಿದೆ. ಬೆಳೆಗಳು ಮೊಳಕೆ ಹಂತದಲ್ಲೇ ಭಸ್ಮವಾಗಿದ್ದರೂ ಸರ್ಕಾರ ಬರ ಪರಿಹಾರ ನೀಡದೆ ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವುದರಲ್ಲಿ ಕಾಲ ವ್ಯಯ ಮಾಡುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿಯೂ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಈ ವರದಿಯಿಂದ ಮಲೆನಾಡು ಹಾಗೂ ಕರಾವಳಿ ಭಾಗದ ರೈತರಿಗೆ ಭಾರಿ ಧಕ್ಕೆಯಾಗಲಿದೆ ಎಂದರು. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜನರ ಹಾಗೂ ರೈತರ ಅಭಿಪ್ರಾಯಕ್ಕೆ ಅನುಗುಣವಾಗಿ ಸರ್ಕಾರ ನಡೆದುಕೊಳ್ಳಬೇಕು. ಈ ವಿಷಯದಲ್ಲಿ ಜೆಡಿಎಸ್ ಪಕ್ಷ ಸಂಪೂರ್ಣವಾಗಿ ರೈತರ ಪರವಾಗಿ ನಿಲ್ಲಲಿದ್ದು, ಎಲ್ಲಾ ಪಕ್ಷಗಳೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾಗಿದೆ ಎಂದು ಪ್ರತಿಪಾದಿಸಿದರು. ಜೊತೆಗೆ ಕಷ್ಟದಲ್ಲಿರುವ ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡದಂತೆ ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.




























