ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್ - Mahanayaka

ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

dk shivakumar
15/04/2026

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. “ಒಳ ಮೀಸಲಾತಿ ಜಾರಿಯ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಶೇಕಡಾವಾರು ವ್ಯತ್ಯಾಸಗಳ ಬಗ್ಗೆ ಜಗಳವಾಡುವುದು ಅನಾವಶ್ಯಕ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮೀಸಲಾತಿ ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಕಾರ್ಯಕ್ರಮವಾಗಿದೆ. ಸಮಾಜದಲ್ಲಿ ಶೋಷಿತರಿಗೆ ಗೌರವ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಡಲು ಇದನ್ನು ರೂಪಿಸಲಾಗಿದೆ ಎಂದು ಡಿಕೆಶಿ ಪ್ರತಿಪಾದಿಸಿದರು.

ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಸುಮಾರು 80,000 ಕೋಟಿ ರೂ. ನೀಡಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರವೊಂದೇ ಎಸ್‌ ಟಿಪಿ (SCP) ಮತ್ತು ಟಿಎಸ್‌ಪಿ (TSP) ಕಾಯ್ದೆಗಳಡಿ 29,000 ಕೋಟಿ ರೂ.ಗಳ ಬೃಹತ್ ಅನುದಾನ ನೀಡಿದೆ ಎಂದು ಅವರು ಮಾಹಿತಿ ನೀಡಿದರು.

ಒಳ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ. ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ ಎಂದು ಅವರು ಟೀಕಿಸಿದರು.

ಸೋನಿಯಾ ಗಾಂಧಿ ಅವರು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದರಿಂದ ಇಂದು ಮಹಿಳೆಯರಿಗೆ ನಾಯಕತ್ವದ ಅವಕಾಶ ಸಿಕ್ಕಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಶೇ.50ರಷ್ಟು ಮೀಸಲಾತಿ ತಂದಿದ್ದು ಕಾಂಗ್ರೆಸ್ ಸಾಧನೆ ಎಂದು ಅವರು ಸ್ಮರಿಸಿದರು.

“ಇತಿಹಾಸ ಮರೆತವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ” ಎಂಬ ಅಂಬೇಡ್ಕರ್ ಅವರ ಮಾತುಗಳನ್ನು ಹೇಳಿದ ಅವರು, ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಗಳನ್ನು ಕೊಂಡಾಡಿದರು.

ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸ್ವಪಕ್ಷದ ನಾಯಕರಲ್ಲೇ ಭಿನ್ನಾಭಿಪ್ರಾಯಗಳು ಮೂಡಿರುವ ಬೆನ್ನಲ್ಲೇ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಸಮತೋಲನ ಸಾಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಕಸರತ್ತು ನಡೆಸುತ್ತಿರುವುದು ಈ ಹೇಳಿಕೆಯಿಂದ ಸ್ಪಷ್ಟವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ