ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಹರಿಯ ಬಿಟ್ಟ ಪಾಪಿಗಳು: 10 ಮಂದಿಯ ಬಂಧನ - Mahanayaka

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಹರಿಯ ಬಿಟ್ಟ ಪಾಪಿಗಳು: 10 ಮಂದಿಯ ಬಂಧನ

stop rape
09/06/2026

ಚನ್ನಗಿರಿ: ತಾಲ್ಲೂಕಿನ ಯಲೋದಹಳ್ಳಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಅತ್ಯಂತ ಘನಘೋರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದಾರುಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಜೂನ್ 3 ರಂದು 41 ವರ್ಷದ ಮಹಿಳೆಯೊಬ್ಬರ ಮೇಲೆ ಈ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಬಳಿಕ, ಮಹಿಳೆ ವಾಹನದಿಂದ ಇಳಿದು ಹೋಗುತ್ತಿರುವ ದೃಶ್ಯ ಸೇರಿದಂತೆ ಹಲವು ಆಕ್ಷೇಪಾರ್ಹ ದೃಶ್ಯಗಳನ್ನು ಆರೋಪಿಗಳು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಾಮುಕರು, ಸಂತ್ರಸ್ತ ಮಹಿಳೆಗೆ ವಿಡಿಯೋ ತೋರಿಸಿ ಬ್ಲಾಕ್‌ಮೇಲ್ ಮಾಡಲು ಆರಂಭಿಸಿದ್ದರು. ಆದರೆ ಆರೋಪಿಗಳ ಬೆದರಿಕೆಗೆ ಮಹಿಳೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಆರೋಪಿಗಳು ಕೆಲ ದಿನಗಳ ಬಳಿಕ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಮೊಬೈಲ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ವಿಷಯ ಎಲ್ಲೆಡೆ ಹರಿದಾಡುತ್ತಿರುವುದು ಸಂತ್ರಸ್ತೆಯ ಗಮನಕ್ಕೆ ಬರುತ್ತಿದ್ದಂತೆ, ಅವರು ಧೈರ್ಯ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಮಹಿಳೆ ನೀಡಿದ ದೂರಿನನ್ವಯ ತಕ್ಷಣವೇ ಕಾರ್ಯಪ್ರವೃತ್ತರಾದ ಬಸವಾಪಟ್ಟಣ ಪೊಲೀಸರು ಪ್ರಕರಣದ ಹತ್ತೂ ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಇಸ್ವಿ ನಾಗರಾಜ್, ನಾಗರಾಜ್, ಅರ್ಜುನ್, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್ ಮತ್ತು ಮಧು ಎಂದು ಗುರುತಿಸಲಾಗಿದೆ.

ಸಂತ್ರಸ್ತೆಯ ದೂರಿನ ಮೇರೆಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 88/2026 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಂಗಳವಾರ ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಎಚ್.ಟಿ. ಶೇಖರ್ ಅವರು ಬಸವಾಪಟ್ಟಣ ಪೊಲೀಸ್ ಠಾಣೆಗೆ ಖುದ್ದಾಗಿ ಭೇಟಿ ನೀಡಿ, ಪ್ರಕರಣದ ಪರಿಶೀಲನೆ ನಡೆಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಾಗೂ ಸಂತ್ರಸ್ತ ಮಹಿಳೆಯನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆಯ ನಂತರವಷ್ಟೇ ಇಡೀ ಘಟನೆಯ ಹಿಂದಿರುವ ಸತ್ಯಾಸತ್ಯತೆ ಹಾಗೂ ಹೆಚ್ಚಿನ ಮಾಹಿತಿ ಹೊರಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ