ಲೈಂಗಿಕ ದೌರ್ಜನ್ಯ: ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ - Mahanayaka

ಲೈಂಗಿಕ ದೌರ್ಜನ್ಯ: ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ

high court.jpg
17/06/2026

ಬೆಂಗಳೂರು: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಪೋಕ್ಸೊ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2026ರ ಮೇ 6ರಂದು ವಚನಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು ನೀಡಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಆಘಾತಕಾರಿ ನಿರ್ಧಾರದ ವಿರುದ್ಧ ಬೇಸರ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಪೀಠವು, ಪೋಕ್ಸೊ ಹಾಗೂ ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡುವ ಪ್ರಶ್ನೆಯೇ ಬರುವುದಿಲ್ಲ. ಈ ಪ್ರಕರಣದಲ್ಲಿ ದೂರು ಮತ್ತು ಎಫ್ ಐಆರ್ ದಾಖಲಾಗುವ ಮುನ್ನವೇ ವಿಚಾರಣಾ ನ್ಯಾಯಾಲಯವು ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದು ಖಂಡಿತವಾಗಿಯೂ ಆಘಾತಕಾರಿ ಸಂಗತಿಯಾಗಿದೆ ಎಂದು ತಿಳಿಸಿದೆ.

ಆದರೆ, ಜಾಮೀನು ಆದೇಶದ ಫಲಾನುಭವಿಯ ವಾದವನ್ನು ಆಲಿಸದೆ ಯಾವುದೇ ಆದೇಶ ಹೊರಡಿಸಲು ಸಾಧ್ಯವಿಲ್ಲದ ಕಾರಣ, ಮುಂದಿನ ವಿಚಾರಣೆಯೊಳಗೆ ಪೊಲೀಸರು ವಚನಾನಂದ ಸ್ವಾಮಿಗೆ ನೋಟಿಸ್ ಜಾರಿಗೊಳಿಸಬೇಕು ಎಂದು ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್. ರವಿಶಂಕರ್ ಅವರು ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ 2026ರ ಮೇ 7ರಂದು ದೂರು ನೀಡಲಾಗಿದ್ದು, ಮೇ 8ರಂದು ಎಫ್ಐಆರ್ ದಾಖಲಾಗಿದೆ. ಆದರೆ ಇದಕ್ಕೂ ಒಂದು ದಿನ ಮುಂಚಿತವಾಗಿ, ಅಂದರೆ ಮೇ 6ರಂದೇ ವಿಚಾರಣಾ ನ್ಯಾಯಾಲಯವು ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಸಂತ್ರಸ್ತ ಬಾಲಕನ ತಾಯಿ 2026ರ ಮೇ 7ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2021 ರಿಂದ 2024ರ ಅವಧಿಯಲ್ಲಿ ಮಠದ ಸ್ನಾನಗೃಹದಲ್ಲಿ ಬಾಲಕರನ್ನು ಬೆತ್ತಲೆಗೊಳಿಸಿ ವಚನಾನಂದ ಸ್ವಾಮಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಹಾಗೂ ಪ್ರತಿರೋಧ ತೋರಿದಾಗ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕೃತ್ಯವು ಹರಿಹರದಲ್ಲಿ ನಡೆದಿದ್ದರಿಂದ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಿ ಮೇ 8ರಂದು ಎಫ್ ಐಆರ್ ದಾಖಲಿಸಲಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ