ಮದುವೆ ನಿರಾಕರಿಸಿದ ಪ್ರೇಯಸಿಯನ್ನು ಊಟಕ್ಕೆಂದು ಕರೆದು ಘೋರ ಕೃತ್ಯ!
ಬೆಂಗಳೂರು: ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಪೈಪ್ ಲೈನ್ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.
ಅಂಜಲಿ (23) ಕೊಲೆಯಾದ ದುರ್ದೈವಿ. ಕೊಲೆ ಮಾಡಿದ ಆರೋಪಿ ಪ್ರಿಯಕರ ರಾಜೀವ್ನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ.
ಅಂಜಲಿ ಹಾಗೂ ರಾಜೀವ್ ಈ ಹಿಂದೆ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಇಬ್ಬರ ಮಧ್ಯೆ ಪರಿಚಯವಾಗಿ, ಕಳೆದ ಮೂರ್ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಚಾರ ಇಬ್ಬರ ಕುಟುಂಬಗಳಿಗೂ ತಿಳಿದಿತ್ತು. ಆದರೆ, ರಾಜೀವ್ಗೆ ಅಪರಾಧದ ಹಿನ್ನೆಲೆ ಇದ್ದಿದ್ದರಿಂದ ಅಂಜಲಿಯ ಕುಟುಂಬಸ್ಥರು ಇವರ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಮನೆಯವರ ನಿರ್ಧಾರಕ್ಕೆ ಮಣಿದ ಅಂಜಲಿ, ರಾಜೀವ್ನಿಂದ ದೂರವಿರಲು ಮತ್ತು ಆತನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಳು. ಆದರೆ ರಾಜೀವ್ ಮಾತ್ರ ತನ್ನನ್ನು ಮದುವೆಯಾಗುವಂತೆ ಅಂಜಲಿಗೆ ಪದೇ ಪದೇ ಒತ್ತಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಸುಮಾರು 8:30ರ ಸುಮಾರಿಗೆ ರಾಜೀವ್, ಅಂಜಲಿಯನ್ನು ಊಟದ ನೆಪದಲ್ಲಿ ಪೈಪ್ ಲೈನ್ ರಸ್ತೆಗೆ ಕರೆತಂದಿದ್ದನು. ಈ ವೇಳೆ ಮತ್ತೆ ಮದುವೆಯ ವಿಚಾರವಾಗಿ ಇಬ್ಬರ ನಡುವೆ ಮಾತುಕತೆ ನಡೆದಿದೆ. ಆದರೆ ಅಂಜಲಿ ಮದುವೆಗೆ ಒಪ್ಪದಿದ್ದಾಗ ಇಬ್ಬರ ನಡುವೆ ಜೋರಾದ ಗಲಾಟೆ ನಡೆದಿದೆ. ಇದರಿಂದ ತೀವ್ರ ಕೋಪಗೊಂಡ ರಾಜೀವ್, ತಾನು ತಂದಿದ್ದ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಆರೋಪಿ ರಾಜೀವ್ನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ವಿಚಾರಣೆ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD





























