ಕ್ರಿಕೆಟ್: ಹೊಸ ಇತಿಹಾಸ ಸೃಷ್ಟಿಸಿದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ!
ಲಂಡನ್ ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ನಿರ್ಣಾಯಕ ಏಕದಿನ (ODI) ಪಂದ್ಯದಲ್ಲಿ ಭಾರತದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಒಟ್ಟಾಗಿ 400 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ಭಾರತದ ಮೊದಲ ಜೋಡಿ ಎಂಬ ಅಪರೂಪದ ಹೆಗ್ಗಳಿಕೆಗೆ ಇವರಿಬ್ಬರು ಪಾತ್ರರಾಗಿದ್ದಾರೆ.
ಟಿ20 ಮತ್ತು ಟೆಸ್ಟ್ ಕ್ರಿಕೆಟ್ ಗೆ ಈಗಾಗಲೇ ನಿವೃತ್ತಿ ಘೋಷಿಸಿರುವ ಈ ಆಧುನಿಕ ಕ್ರಿಕೆಟ್ನ ದಿಗ್ಗಜರಿಗೆ ಈಗ ಏಕದಿನ ಮಾದರಿಯೇ ಕೊನೆಯ ಗಡಿಯಾಗಿದೆ. 2027ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತಕ್ಕೆ ಪ್ರಶಸ್ತಿ ತಂದುಕೊಟ್ಟು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದು ಇವರಿಬ್ಬರ ಅಂತಿಮ ಗುರಿಯಾಗಿದೆ.
ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ಕ್ರಿಕೆಟ್ ನ ಬೆನ್ನೆಲುಬಾಗಿ ನಿಂತಿರುವ ಈ ಇಬ್ಬರು ಆಟಗಾರರು ಒಟ್ಟಾಗಿ 48,574 ಅಂತರರಾಷ್ಟ್ರೀಯ ರನ್ ಹಾಗೂ 135 ಶತಕಗಳನ್ನು ಸಿಡಿಸಿದ್ದಾರೆ.
ರೋಹಿತ್ ಶರ್ಮಾ: ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ 514 ಅಂತರರಾಷ್ಟ್ರೀಯ ಪಂದ್ಯಗಳಿಂದ 50 ಶತಕಗಳ ನೆರವಿನಿಂದ 20,289 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅವರು 288 ಪಂದ್ಯಗಳಿಂದ 11,757 ರನ್ ಗಳಿಸಿದ್ದು, ಇದರಲ್ಲಿ 33 ಶತಕಗಳು ಸೇರಿವೆ.
ವಿರಾಟ್ ಕೊಹ್ಲಿ: 562 ಅಂತರರಾಷ್ಟ್ರೀಯ ಪಂದ್ಯಗಳಿಂದ 85 ಶತಕಗಳೊಂದಿಗೆ ಒಟ್ಟು 28,285 ರನ್ ಬಾರಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 314 ಪಂದ್ಯಗಳನ್ನಾಡಿರುವ ಕೊಹ್ಲಿ, 54 ಶತಕಗಳೊಂದಿಗೆ 14,867 ರನ್ ಕಲೆಹಾಕಿದ್ದಾರೆ.
ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಇನ್ನು ಪಂದ್ಯ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದ್ದು, ಪ್ರಮುಖ ವೇಗಿ ಜಸ್ಪ್ರಿತ್ ಬುಮ್ರಾ ಮೊಣಕಾಲು ಗಾಯದ ಕಾರಣ ಪಂದ್ಯದಿಂದ ಹೊರಗುಳಿದಿದ್ದಾರೆ.
ಭಾರತ ತಂಡದ ಪ್ಲೇಯಿಂಗ್ XI:
ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕಿ), ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್, ಅರ್ಶ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























