12:32 AM Tuesday 28 - October 2025

ಕೇಂದ್ರದ ಒಳ ಮೀಸಲಾತಿ ಪರಿಶೀಲನೆ: ದಲಿತರ ದಾರಿ ತಪ್ಪಿಸುವ ಕುತಂತ್ರ: ಸಿಎಂ ಸಿದ್ದರಾಮಯ್ಯ ಟೀಕೆ

c m siddaramaiah
20/01/2024

ಬೆಂಗಳೂರು: ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದು, ಇದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದು ಸಿಎಂ  ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು “ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ”. ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದಿದ್ದಾರೆ.

ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘‘ಸಮಯ ಕೊಲ್ಲುವ’’ ತಂತ್ರ ಅಷ್ಟೇ ಆಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ  ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version