ವಿದ್ಯಾರ್ಥಿ ಹೋರಾಟ ಹತ್ತಿಕ್ಕಲು ಪೊಲೀಸರ ಬಳಕೆ: ಮಂಗಳೂರು ವಿವಿ ಕುಲಪತಿ ವಿರುದ್ಧ ಎಬಿವಿಪಿ ಆಕ್ರೋಶ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಬಂಧಿಸಿರುವುದು ಅತ್ಯಂತ ಖಂಡನೀಯ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆರೋಪಿಸಿದೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ, ಜೂನ್ 12ರಂದು ಮಂಗಳೂರು ವಿಶ್ವವಿದ್ಯಾಲಯದ ಆಡಳಿತ ಸೌಧದ ಮುಂಭಾಗದಲ್ಲಿ ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಪೊಲೀಸ್ ಇಲಾಖೆಯ ಅನುಮತಿ ಪಡೆದೇ ಶಾಂತಿಯುತ ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಬದಲು, ವಿವಿ ಕುಲಪತಿಗಳು ಪೊಲೀಸರ ಮೂಲಕ ವಿದ್ಯಾರ್ಥಿಗಳನ್ನು ಬಂಧಿಸಿ ಹೋರಾಟವನ್ನು ದಮನಿಸಲು ಯತ್ನಿಸಿದ್ದಾರೆ ಎಂದು ದೂರಿದರು.
ಒಂದು ಕಾಲದಲ್ಲಿ ದೇಶದಲ್ಲೇ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿ ಗುರುತಿಸಿಕೊಂಡಿದ್ದ ಮಂಗಳೂರು ವಿವಿಯು ಕಳೆದ ಕೆಲವು ವರ್ಷಗಳಿಂದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಮತ್ತು ತೀವ್ರ ನಿರ್ಲಕ್ಷ್ಯದಿಂದಾಗಿ ತನ್ನ ಘನತೆಯನ್ನು ಕಳೆದುಕೊಳ್ಳುತ್ತಿದೆ. ವಿದ್ಯಾರ್ಥಿಗಳು ಇಂದು ಕನಿಷ್ಠ ಮೂಲಭೂತ ಸೌಕರ್ಯಗಳ ಕೊರತೆ, ಅನಗತ್ಯ ಶುಲ್ಕದ ಹೊರೆ, ಶಾಶ್ವತ ಬೋಧಕ ಸಿಬ್ಬಂದಿಯ ಅಭಾವ ಹಾಗೂ ಉದ್ಯೋಗಾವಕಾಶಗಳ ಕೊರತೆಯಿಂದ ಕಂಗಾಲಾಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಕುಲಪತಿಗಳು ಬೇಜವಾಬ್ದಾರಿಯ ಉತ್ತರಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
“ವಿದ್ಯಾರ್ಥಿಗಳು ನ್ಯಾಯಯುತ ಸೌಲಭ್ಯಗಳಿಗಾಗಿ ಮನವಿ ಮಾಡಿದಾಗ, ‘ನಮ್ಮಿಂದ ಇಷ್ಟೇ ಸೌಲಭ್ಯ ನೀಡಲು ಸಾಧ್ಯ, ತೃಪ್ತಿಯಿಲ್ಲದಿದ್ದರೆ ಬೇರೆ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳನ್ನು ನೋಡಿಕೊಳ್ಳಿ’ ಎಂದು ಕುಲಪತಿಗಳು ಉಡಾಫೆಯ ಮಾತುಗಳನ್ನಾಡಿದ್ದಾರೆ” ಎಂದು ಮಂಗಳೂರು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶ್ವಿನ್ ಗಂಭೀರ ಆರೋಪ ಮಾಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ತಮ್ಮ ಸಮಸ್ಯೆಗಳನ್ನು ಮಂಡಿಸುವುದು ವಿದ್ಯಾರ್ಥಿಗಳ ಹಕ್ಕಾಗಿದೆ. ಅದನ್ನು ಪೊಲೀಸ್ ಬಲದ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ವಿಶ್ವವಿದ್ಯಾಲಯವು ತಕ್ಷಣವೇ ವಿದ್ಯಾರ್ಥಿಗಳೊಂದಿಗೆ ಗೌರವಯುತ ಸಂವಾದ ನಡೆಸಿ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಬಿವಿಪಿ ಎಚ್ಚರಿಸಿದೆ.
ಈ ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿವಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಹಾರ್ ಹಾಗೂ ಎಬಿವಿಪಿ ಕೊಣಾಜೆ ನಗರ ಕಾರ್ಯದರ್ಶಿ ಮನು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























