ಕರಾವಳಿ - ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ನಟ ರಿಷಬ್‌ ಶೆಟ್ಟಿ ನೇಮಕ - Mahanayaka

ಕರಾವಳಿ — ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ನಟ ರಿಷಬ್‌ ಶೆಟ್ಟಿ ನೇಮಕ

actor rishab shetty
20/06/2026

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮದ ಪ್ರಚಾರಕ್ಕಾಗಿ ಖ್ಯಾತ ನಟ ಮತ್ತು ನಿರ್ದೇಶಕ ರಿಷಬ್‌ ಶೆಟ್ಟಿ ಅವರನ್ನು ರಾಯಭಾರಿಯನ್ನಾಗಿ (ಬ್ರಾಂಡ್ ಅಂಬಾಸಿಡರ್) ನೇಮಕ ಮಾಡಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಕರಾವಳಿ ಭಾಗದ ಶಾಸಕರು, ಉದ್ಯಮಿಗಳು ಹಾಗೂ ನಟ ರಿಷಬ್ ಶೆಟ್ಟಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಇನ್ನು 15–20 ದಿನಗಳಲ್ಲಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಅದಕ್ಕೂ ಮುನ್ನ ಸಿಆರ್‌ ಝಡ್‌ (CRZ) ಮತ್ತು ಅರಣ್ಯ ಇಲಾಖೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ಬಗ್ಗೆ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಪ್ರಸ್ತುತ ಅನುಮೋದನೆ ನೀಡಿರುವ 45 ಯೋಜನೆಗಳಿಂದ ಸುಮಾರು 4,500 ಉದ್ಯೋಗಗಳು ಸೃಷ್ಟಿಯಾಗಲಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರ ಗಮನ ಹರಿಸಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೋಂ ಸ್ಟೇಗಳಿಗೆ ಇರುವ ಕಠಿಣ ನಿಯಮಗಳನ್ನು ಸಡಿಲಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಪರಿಸರಕ್ಕೆ ಧಕ್ಕೆ ಬಾರದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ಮಾತನಾಡಿದ ನಟ ರಿಷಬ್ ಶೆಟ್ಟಿ, ಕರಾವಳಿಯ ಜಾನಪದ ಕಲೆ ಮತ್ತು ಸಂಗೀತಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೆ, ಕರ್ನಾಟಕದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಿಕೊಡುವುದರಿಂದ ಕೇರಳ, ಗೋವಾ ಮತ್ತು ಕರ್ನಾಟಕದ ಚಲನಚಿತ್ರ ರಂಗಕ್ಕೆ ದೊಡ್ಡ ಮಟ್ಟದ ಲಾಭವಾಗಲಿದೆ ಎಂದು ಅಭಿಪ್ರಾಯಪಟ್ಟರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ