ಕಾಬೂಲ್ ನ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿ: 400ಕ್ಕೂ ಹೆಚ್ಚು ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ ಮತ್ತು ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಸುಮಾರು 400 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ.
ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಈ ದಾಳಿ ನಡೆದಿದೆ. ಕಾಬೂಲ್ ನಲ್ಲಿರುವ 2,000 ಹಾಸಿಗೆಗಳ ಸಾಮರ್ಥ್ಯದ ‘ಓಮಿದ್ ಮಾದಕ ವ್ಯಸನಿಗಳ ಪುನರ್ವಸತಿ ಆಸ್ಪತ್ರೆ’ಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಅಫ್ಘಾನ್ ಸರ್ಕಾರದ ವಕ್ತಾರ ಹಮ್ದುಲ್ಲಾ ಫಿತ್ರತ್ ಮಾಹಿತಿ ನೀಡಿದ್ದಾರೆ. ದಾಳಿಯಿಂದಾಗಿ ಆಸ್ಪತ್ರೆಯ ಬಹುತೇಕ ಭಾಗಗಳು ಧ್ವಂಸಗೊಂಡಿದ್ದು, ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಆದರೆ, ಅಫ್ಘಾನಿಸ್ತಾನದ ಈ ಆರೋಪವನ್ನು ಪಾಕಿಸ್ತಾನ ತಳ್ಳಿಹಾಕಿದೆ. ನಾವು ಯಾವುದೇ ನಾಗರಿಕ ಕೇಂದ್ರಗಳು ಅಥವಾ ಆಸ್ಪತ್ರೆಗಳನ್ನು ಗುರಿಯಾಗಿಸಿಲ್ಲ. ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಮಾತ್ರ ನಿಖರವಾದ ದಾಳಿ ನಡೆಸಲಾಗಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವಾಲಯ ತಿಳಿಸಿದೆ. ತಾಲಿಬಾನ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಪಾಕಿಸ್ತಾನ ಪ್ರತ್ಯಾರೋಪ ಮಾಡಿದೆ.
ಈ ಭೀಕರ ಘಟನೆಯ ಬಗ್ಗೆ ಅಫ್ಘಾನಿಸ್ತಾನದ ಖ್ಯಾತ ಕ್ರಿಕೆಟಿಗ ರಶೀದ್ ಖಾನ್ ಮತ್ತು ಇತರ ಆಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪವಿತ್ರ ರಂಜಾನ್ ಮಾಸದಲ್ಲಿ ನಾಗರಿಕರ ಮೇಲೆ, ಅದರಲ್ಲೂ ಆಸ್ಪತ್ರೆಗಳ ಮೇಲೆ ದಾಳಿ ಮಾಡುವುದು “ಯುದ್ಧ ಅಪರಾಧ” ಎಂದು ರಶೀದ್ ಖಾನ್ ಖಂಡಿಸಿದ್ದಾರೆ.
ಕಳೆದ ಕೆಲವು ವಾರಗಳಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಉಭಯ ದೇಶಗಳ ನಡುವೆ ಸಂಘರ್ಷ ತಾರಕಕ್ಕೇರಿದೆ. ಈ ವೈಮಾನಿಕ ದಾಳಿಯು ಆ ಸಂಘರ್ಷದ ಒಂದು ಭಾಗವೆಂದು ಹೇಳಲಾಗುತ್ತಿದೆ. ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಸಂಸ್ಥೆಗಳು ಈ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಅಫ್ಘಾನ್ ಸರ್ಕಾರ ಆಗ್ರಹಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























