ಮಲೆಮಹದೇಶ್ವರ ಬೆಟ್ಟದ ಕ್ಷೇತ್ರಕ್ಕೆ ಸಕಲ ಸೌಲಭ್ಯ : ಸಿಎಂ ಬಸವರಾಜ ಬೊಮ್ಮಾಯಿ ಭರವಸೆ - Mahanayaka
2:04 PM Thursday 12 - December 2024

ಮಲೆಮಹದೇಶ್ವರ ಬೆಟ್ಟದ ಕ್ಷೇತ್ರಕ್ಕೆ ಸಕಲ ಸೌಲಭ್ಯ : ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

cm bommai
13/12/2022

ಚಾಮರಾಜನಗರ:  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸಮರ್ಪಕವಾಗಿ ಮೂಲ ಸೌಕರ್ಯ ಕಲ್ಪಿಸಲು ಹಾಗೂ ಕ್ಷೇತ್ರದ ಅಭಿವೃದ್ದಿ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರು ಹಾಗೂ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಮಲೆ ಮಹದೇಶ್ವರಬೆಟ್ಟಕ್ಕೆ ಭೇಟಿ ನೀಡಿ ಮಲೆಮಹದೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದ ಬಳಿಕ ನಾಗಮಲೆ ಭವನದಲ್ಲಿಂದು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಮಹದೇಶ್ವರಬೆಟ್ಟಕ್ಕೆ ಪ್ರತಿನಿತ್ಯವೂ ಸಾವಿರಾರು ಭಕ್ತರು ಬರುತ್ತಿದ್ದಾರೆ. ಜಾತ್ರೆಗಳ ಸಮಯದಲ್ಲಿ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಎಲ್ಲಾ ಭಕ್ತರಿಗೆ ಅನುಕೂಲವಾಗುವಂತೆ ಮೂಲ ಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸಲು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಭಕ್ತಾಧಿಗಳ ವಾಸ್ತವ್ಯಕ್ಕಾಗಿ ಡಾಮಿಟರಿ ನಿರ್ಮಾಣ ಮಾಡಬೇಕು. ಕ್ಷೇತ್ರದಲ್ಲಿ ಒಳಚರಂಡಿ ಕಾಮಗಾರಿ ಆರಂಭವಾಗಿ ಬಹಳ ವರ್ಷಗಳಾಗಿವೆ. ಇದು ಅಗತ್ಯವಾಗಿ ಆಗಬೇಕಾದ ಕೆಲಸ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಲು ಸಭೆಯಲ್ಲಿ ಸೂಚಿಸಲಾಗಿದೆ ಎಂದರು.

ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ಮಹದೇಶ್ವರರ ಬೃಹತ್ ಪ್ರತಿಮೆಯನ್ನು ಮುಂದಿನ ತಿಂಗಳ ವೇಳೆಗೆ ಪೂರ್ಣಗೊಳಿಸಿ ಉದ್ಘಾಟಿಸಲು ಸಿದ್ದಪಡಿಸಬೇಕು. ಇದಕ್ಕೆ ಹೊಂದಿಕೊಂಡಂತಿರುವ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದರು.

ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗೆ ಆಶ್ರಯ, ನೆರಳಿನ ವ್ಯವಸ್ಥೆ, ಇನ್ನಿತರ ಸಕಲ ಸೌಕರ್ಯಗಳು ಇರಬೇಕು. ದೇವಾಲಯ, ಕ್ಷೇತ್ರದ ಅಭಿವೃದ್ದಿ ಸಂಬಂಧ ತಜ್ಞರನ್ನು ಕರೆಯಿಸಿ ಇನ್ನಷ್ಟು ಯೋಜನಾ ಬದ್ದವಾಗಿ ಅಭಿವೃದ್ದಿ ಮಾಡುವ ಸಂಬಂಧ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಮಲೆ ಮಹದೇಶ್ವರ ಹುಲಿ ಯೋಜನೆ ಘೋಷಣೆ ವಿಚಾರ ವನ್ಯಜೀವಿ ಮಂಡಳಿ ಮುಂದಿದೆ. ಇನ್ನೂ ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬೆಟ್ಟದ ವ್ಯಾಪ್ತಿಯಲ್ಲಿರುವ ಜನವಸತಿ ಪ್ರದೇಶಗಳಿಗೆ ಯಾವುದೇ ತೊಂದರೆಯಾಗಬಾರದೆ ಎಂಬ ದೃಷ್ಠಿಯಿಂದ ಹಲವು ಸ್ಪಷ್ಟನೆ ಕೇಳಿದ್ದೇನೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಇದಕ್ಕೂ ಮೊದಲು ನಾಗಮಲೆ ಭವನದಲ್ಲಿ ನಡೆದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ, ಕಂದಾಯ ಸಚಿವರಾದ ಆರ್. ಅಶೋಕ, ಸಾಲೂರು ಮಠದ ಶ್ರೀಗಾಳದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿಎಸ್. ನಿರಂಜನ್‍ಕುಮಾರ್, ಹಿರಿಯ ಅಧಿಕಾರಿಗಳಾದ ಜಯರಾಂ,ಪ್ರಾದೇಶಿಕ ಆಯುಕ್ತರಾದ  ಡಾ.ಜಿ.ಸಿ.ಪ್ರಕಾಶ್, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಮಲೆಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ ಶಿವಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಖ್ಯಮಂತ್ರಿಯವರು ಮಲೆ ಮಹದೇಶ್ವರ ದೇವಾಲಯಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದರು.ಕಂದಾಯ ಸಚಿವರಾದ ಆರ್.ಅಶೋಕ,ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ,ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್,ಸಿ.ಎಸ್.ನಿರಂಜನ್ ಕುಮಾರ್ ಅಧಿಕಾರಿಗಳು ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ