ಲಂಚಕ್ಕೆ ಪ್ರೋತ್ಸಾಹ ಆರೋಪ: ಸಚಿವ ಕೆ. ಎಂ. ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು - Mahanayaka

ಲಂಚಕ್ಕೆ ಪ್ರೋತ್ಸಾಹ ಆರೋಪ: ಸಚಿವ ಕೆ. ಎಂ. ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು

shivalinge gowda
21/09/2026

ಬೆಂಗಳೂರು: ಸಕಲೇಶಪುರದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಲಂಚದ ವಿಚಾರವಾಗಿ ಸಚಿವ ಕೆ. ಎಂ. ಶಿವಲಿಂಗೇಗೌಡ ಅವರು ನೀಡಿದ್ದಾರೆನ್ನಲಾದ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಪ್ರಕರಣ ಈಗ ರಾಜಪಾಲರ ಅಂಗಳ ತಲುಪಿದೆ. ಸಚಿವರ ಹೇಳಿಕೆಯು ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವಂತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ ಇಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಚಿವರ ಈ ಹೇಳಿಕೆಯು ಸಂವಿಧಾನದ ಪರಿಚ್ಛೇದ 14ರ ಸಮಾನತೆಯ ಹಕ್ಕು ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಸೆಕ್ಷನ್ 7, 8 ಮತ್ತು 12ರ ನಿಯಮಗಳನ್ನು ನೇರವಾಗಿ ಉಲ್ಲಂಘಿಸುತ್ತದೆ ಎಂದು ಅವರು ದೂರಿದ್ದಾರೆ. ಅಲ್ಲದೆ, ಬಹಿರಂಗವಾಗಿ ಭ್ರಷ್ಟಾಚಾರವನ್ನು ಬೆಂಬಲಿಸುವ ಮತ್ತು ಪ್ರೋತ್ಸಾಹಿಸುವ ರೀತಿಯಲ್ಲಿ ಮಾತನಾಡಿದ ಕೆ. ಎಂ. ಶಿವಲಿಂಗೇಗೌಡ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಬಲವಾಗಿ ಒತ್ತಾಯಿಸಿದ್ದಾರೆ.

ಸಕಲೇಶಪುರ ತಹಸೀಲ್ದಾರ್ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಮಾತನಾಡಿದ್ದ ಸಚಿವ ಶಿವಲಿಂಗೇಗೌಡರು, ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ, ಆದರೆ ಬಲಾತ್ಕಾರವಾಗಿ ದುಡ್ಡು ಕಿತ್ತುಕೊಳ್ಳೋದು ಸರಿಯಲ್ಲ ಎಂದು ಹೇಳಿದ್ದರು ಎನ್ನಲಾದ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ತಮ್ಮ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಶಿವಲಿಂಗೇಗೌಡ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ತಾವೇನು ನೇರವಾಗಿ ಹಣ ಕೊಡಿ ಎಂದು ಹೇಳಿಲ್ಲವೆಂದೂ, ಕೆಲಸ ಮಾಡಿಕೊಟ್ಟ ಅಧಿಕಾರಿಗಳನ್ನು ಗೌರವಯುತವಾಗಿ ಕಾಣಬೇಕು ಎಂದಷ್ಟೇ ಹೇಳಿದ್ದಾಗಿ ತಿಳಿಸಿದ್ದಾರೆ. ಸಭೆಯಲ್ಲಿ ರೈತರು ಹಾಗೂ ಅಧಿಕಾರಿಗಳ ನಡುವೆ ಘರ್ಷಣೆಯ ವಾತಾವರಣವಿದ್ದು, ಅಧಿಕಾರಿಗಳು ತಮ್ಮ ಮೇಲಿನ ಗಲಾಟೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರಿಂದ ಆ ಸಂದರ್ಭದಲ್ಲಿ ಆ ಮಾತುಗಳನ್ನಾಡಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮ್ಮ ವೀಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಪ್ರತಿಪಕ್ಷ ಬಿಜೆಪಿಯ ನೀಚತಂತ್ರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಮಾಧ್ಯಮಗಳು ವಿಪಕ್ಷಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler