ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
ಏಕ್ತಾ ನಗರ (ಗುಜರಾತ್): ಭಾರತೀಯ ಚಿತ್ರರಂಗಕ್ಕೆ ನೀಡಿರುವ ಅಪಾರ ಕೊಡುಗೆ ಹಾಗೂ ಸುದೀರ್ಘ ಕಲಾಪಯಣಕ್ಕಾಗಿ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುಜರಾತ್ ನ ಏಕ್ತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾರಂಗದ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಸಂತಸ ಹಂಚಿಕೊಂಡ ಅನಂತ್ ನಾಗ್, ಕಳೆದ ವರ್ಷ ಪದ್ಮಭೂಷಣ ಗೌರವ ಲಭಿಸಿತ್ತು ಹಾಗೂ ಈ ವರ್ಷ ಭಾರತೀಯ ಚಿತ್ರರಂಗದ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅತ್ಯಂತ ಸಂತೋಷ ತಂದಿದೆ ಎಂದು ತಿಳಿಸಿ, ಈ ಮಹಾನ್ ಗೌರವವನ್ನು ಸಮಸ್ತ ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಅರ್ಪಿಸುವುದಾಗಿ ಹೇಳಿದರು.
1948ರ ಸೆಪ್ಟೆಂಬರ್ 4ರಂದು ಜನಿಸಿದ ಅನಂತ್ ನಾಗ್ (ಅನಂತ್ ನಾಗರಕಟ್ಟೆ) ರಂಗಭೂಮಿಯಿಂದ ತಮ್ಮ ಅಭಿನಯ ಪಯಣ ಆರಂಭಿಸಿ, ಚಿತ್ರರಂಗದಲ್ಲಿ ಯಶಸ್ವಿ 50 ವರ್ಷಗಳನ್ನು ಪೂರೈಸಿದ್ದಾರೆ. ಕನ್ನಡ ಮಾತ್ರವಲ್ಲದೇ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಮರಾಠಿ ಸೇರಿದಂತೆ ವಿವಿಧ ಭಾಷೆಗಳ 300ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಅವರು, 1973ರಲ್ಲಿ ‘ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ 1974ರಲ್ಲಿ ಶ್ಯಾಮ್ ಬೆನೆಗಲ್ ನಿರ್ದೇಶನದ ‘ಅಂಕೂರ್’ ಸಿನಿಮಾ ಮೂಲಕ ಬಾಲಿವುಡ್‌ಗೂ ಅಡಿ ಇಟ್ಟರು. ಆರ್.ಕೆ. ನಾರಾಯಣ್ ಅವರ ಕಥೆಗಳನ್ನು ಆಧರಿಸಿ, ಸಹೋದರ ದಿ. ಶಂಕರ್ ನಾಗ್ ಸಹಯೋಗದಲ್ಲಿ ಮೂಡಿಬಂದಿದ್ದ ‘ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿನ ಅವರ ಅಭಿನಯ ರಾಷ್ಟ್ರಮಟ್ಟದಲ್ಲಿ ವ್ಯಾಪಕ ಮನ್ನಣೆ ಗಳಿಸಿತ್ತು.
ಅನಂತ್ ನಾಗ್ ಅವರ ಈ ಸುದೀರ್ಘ ಕಲಾ ಸೇವೆಯನ್ನು ಗುರುತಿಸಿ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಒಲಿದುಬಂದಿವೆ. ಅವರಿಗೆ 2025ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮಭೂಷಣ’ ನೀಡಿ ಗೌರವಿಸಲಾಗಿದ್ದು, ಐದು ಬಾರಿ ಅತ್ಯುತ್ತಮ ನಟ ವಿಭಾಗದಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಹಾಗೂ ಐದು ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇದರೊಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸೇರಿದಂತೆ ಹಲವಾರು ಮನ್ನಣೆಗಳಿಗೆ ಪಾತ್ರರಾಗಿದ್ದಾರೆ.
ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಜೀವಮಾನ ಸಾಧನೆಯ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದಿರುವುದಕ್ಕೆ ಚಂದನವನದ ಗಣ್ಯರು, ರಾಜಕೀಯ ಧುರೀಣರು ಹಾಗೂ ಕೋಟ್ಯಂತರ ಕನ್ನಡಿಗರು ಹರ್ಷ ವ್ಯಕ್ತಪಡಿಸಿ ಶುಭಹಾರೈಸಿದ್ದಾರೆ.




























