ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ: ಮುಖ್ಯಮಂತ್ರಿ ವಿಶ್ವಾಸ

siddaramaiah mandya
18/02/2024

ಮಂಡ್ಯ ( ಮಳವಳ್ಳಿ): ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು  ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ  ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರು 28 ಕ್ಕೆ 28 ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ ಎಂದರು.

ಸ್ಥಳೀಯ ಮುಖಂಡರು ಸೂಚಿಸಿದವರಿಗೆ  ಟಿಕೆಟ್:

ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಹೇಳಿದರು.

ಡಾಲಿ ಧನಂಜಯಗೆ ಟಿಕೆಟ್ : ಈ ಬಗ್ಗೆ ಗೊತ್ತಿಲ್ಲ

ಚಿತ್ರ ನಟ ಡಾಲಿ ಧನಂಜಯ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮ ಪಕ್ಷದಲ್ಲಿ ಈ  ಬಗ್ಗೆ ಚರ್ಚೆಯಾಗಿಲ್ಲ, ಇದರ ಬಗ್ಗೆ ನನಗೆ  ಗೊತ್ತೂ ಇಲ್ಲ ಎಂದರು.

ಜೆಡಿಎಸ್ ಒಂದು ಪ್ರತ್ಯೇಕ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ:

ಕಳೆದ ಬಾರಿ ಮೈತ್ರಿಯಿಂದ ಬಿಜೆಪಿಯನ್ನು ಎದುರಿಸಿದ್ದು ಈ ಬಾರಿ ಏಕಾಂಗಿಯಾಗಿ ಬಿಜೆಪಿಯನ್ನು ಎದುರಿಸುತ್ತಿರುವ ಬಗ್ಗೆ ಮಾತನಾಡಿ, ಈಗ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷ ವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.

ಬಿಜೆಪಿಗೆ ಬಜೆಟ್ ಅರ್ಥವಾಗಿಲ್ಲ:

ಬಿಜೆಪಿ ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಬಜೆಟ್ ಅರ್ಥವಾಗಿಲ್ಲ. ಬಡವರ ವಿರೋಧಿ ಬಿಜೆಪಿಗೆ ಬಜೆಟ್ ಅರ್ಥವಾಗೋಲ್ಲ. ಬಡವರ ಪರವಾಗಿ ನಾವು  ಕಾರ್ಯಕ್ರಮಗಳನ್ನು ನೀಡಿರುವುದು ಎಂದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು:

ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ ಎಂದರು.

ಕೇಂದ್ರದಿಂದ 1.87 ಲಕ್ಷ ಕೋಟಿ ರೂ.ಗಳು ನಮಗೆ ನಷ್ಟವಾಗಿದೆ.  ಆ ಅನುದಾನ ಬಂದರೆ ಇನ್ನೂ ಹೆಚ್ಚು ಕಾರ್ಯಕ್ರಮಗಳನ್ನು ರಾಜ್ಯಕ್ಕೆ ಕೊಡಬಹುದು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿಎಂ ಆದ ನಂತರ ಮಳವಳ್ಳಿಗೆ ಪ್ರಥಮ ಭೇಟಿ:

ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿ ಆಗಮಿಸುತ್ತಿದ್ದು, ಇಲ್ಲಿ ಸಮರ್ಥವಾದ ಮುಖಂಡರು ಮತ್ತು ಶಾಸಕರಿರುವುದರಿಂದ ಪದೇ ಪದೇ ಬರಬೇಕಾದ ಅಗತ್ಯವಿಲ್ಲ. ಜಿಲ್ಲಾ ಮಂತ್ರಿಗಳೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

Exit mobile version