ಬಗರ್ ಹುಕುಂ ಭೂ ಹಗರಣ: ಬೇಲೂರು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸಿಐಡಿ ವಶಕ್ಕೆ!
ಹಾಸನ: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ (CID) ಅಧಿಕಾರಿಗಳು ಬಂಧಿಸಿದ್ದಾರೆ.
ಕೆ.ಎಸ್. ಲಿಂಗೇಶ್ ಅವರು 2018 ರಿಂದ 2023ರ ಅವಧಿಯಲ್ಲಿ ಬೇಲೂರು ಶಾಸಕರಾಗಿದ್ದಾಗ ‘ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿ’ಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಸುಮಾರು 2,750 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ, 1,430 ಬೋಗಸ್ (ನಕಲಿ) ಫಲಾನುಭವಿಗಳಿಗೆ ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಎಂಬುವವರು ಈ ಹಗರಣದ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ದೂರನ್ನು ಪರಿಗಣಿಸಿದ ವಿಚಾರಣಾಧೀನ ನ್ಯಾಯಾಲಯವು ಎಫ್ ಐಆರ್ (FIR) ದಾಖಲಿಸಲು ಆದೇಶ ನೀಡಿತ್ತು. ಇದರ ಅನ್ವಯ ಆರೋಪಿಗಳ ವಿರುದ್ಧ ನಕಲಿ ದಾಖಲೆ ಸೃಷ್ಟಿ, ವಂಚನೆ ಹಾಗೂ ಒಳಸಂಚು ಸೇರಿದಂತೆ ಐಪಿಸಿ ಸೆಕ್ಷನ್ಗಳಾದ 468, 464, 465, 471, 409, 420 ಮತ್ತು 120ಬಿಯಡಿ ಪ್ರಕರಣ ದಾಖಲಾಗಿತ್ತು. ನಂತರ ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.
ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಶಾಸಕ ಲಿಂಗೇಶ್ ಅವರು ನಿಯಮ ಬಾಹಿರವಾಗಿ 750 ಎಕರೆಗಿಂತಲೂ ಅಧಿಕ ಭೂಮಿ ಮಂಜೂರಾತಿಗೆ ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಂದಿನ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಇವರೊಂದಿಗೆ ಶಾಮೀಲಾಗಿ, ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಕ್ಕೆ ವಂಚಿಸುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಲು ನೆರವಾಗಿದ್ದಾರೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಮಾಜಿ ಶಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























