ಬೆಳ್ತಂಗಡಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ
ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಅವರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ ಸೌಮ್ಯ ಶೆಟ್ಟಿ ಕಳೆದ ಫೆಬ್ರವರಿ 17ರಂದು ನೋಂದಣಿ ವಿವಾಹವಾಗಿದ್ದರು (Register Marriage). ಸೌಮ್ಯ ಶೆಟ್ಟಿ ಪುತ್ತೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಮದುವೆಯ ನಂತರ ಇವರಿಬ್ಬರು ಕಾರ್ಕಳದ ಬಂಗ್ಲೆಗುಡ್ಡೆ ಎಂಬಲ್ಲಿ ವಾಸವಾಗಿದ್ದರು.
ವರದಿಗಳ ಪ್ರಕಾರ, ಸುದೀಪ್ ಅವರ ಪತ್ನಿ ಸೌಮ್ಯ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಮಾರ್ಚ್ 17ರಂದು ಸುದೀಪ್ ತಮ್ಮ ತಾಯಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದಾಗ, ಸೌಮ್ಯ ಅವರು ಸ್ಕೂಟರ್‌ನಲ್ಲಿ ಬಂದು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಲಾಗಿತ್ತು.
ಇದಾದ ಬಳಿಕ ಮಾರ್ಚ್ 22ರಂದು ಸುದೀಪ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 24ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ತನ್ನ ಮಗನ ಸಾವಿಗೆ ಪತ್ನಿ ನೀಡಿದ ಮಾನಸಿಕ ಚಿತ್ರಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆಯೇ ಕಾರಣ ಎಂದು ಸುದೀಪ್ ತಂದೆ ದಾಮೋದರ್ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ತನಿಖೆ ನಡೆಸಿದ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್. ನೇತೃತ್ವದ ತಂಡ, ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಏಪ್ರಿಲ್ 11ರಂದು ಸೌಮ್ಯ ಶೆಟ್ಟಿಯನ್ನು ಬಂಧಿಸಿದೆ. ಸದ್ಯ ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























