ಬೆಂಗಳೂರು: ಡಿವೈಡರ್ ಹಾರಿ ಬಸ್‌ ಗೆ ಗುದ್ದಿದ ಕಾರು, ಐವರು ಸಾವು - Mahanayaka

ಬೆಂಗಳೂರು: ಡಿವೈಡರ್ ಹಾರಿ ಬಸ್‌ ಗೆ ಗುದ್ದಿದ ಕಾರು, ಐವರು ಸಾವು

ksrtc bus
15/02/2026

ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಜಿಂದಾಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.

ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿದೆ. ಈ ವೇಳೆ ಎದುರು ದಿಕ್ಕಿನಿಂದ (ಬೆಂಗಳೂರು ಕಡೆಯಿಂದ) ಬರುತ್ತಿದ್ದ ಕೆಎಸ್‌ ಆರ್‌ ಟಿಸಿ (KSRTC) ಬಸ್‌ ಗೆ ಕಾರು ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಮೃತಪಟ್ಟವರನ್ನು ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಮತ್ತು ಹರ್ಷಿತ್ (20) ಎಂದು ಗುರುತಿಸಲಾಗಿದೆ. ಇನ್ನೋರ್ವನ ಗುರುತು ಪತ್ತೆ ಹಚ್ಚಲಾಗುತ್ತಿದೆ. ಮೃತ ಹರ್ಷಿತ್ ರಾಜನಕುಂಟೆಯ ಸಾಯಿ ವಿದ್ಯಾ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದು, ರಾತ್ರಿ “ಸ್ನೇಹಿತನನ್ನು ಭೇಟಿ ಮಾಡಿ ಬರುತ್ತೇನೆ” ಎಂದು ಮನೆಯಿಂದ ಹೊರಬಂದಿದ್ದ ಎಂದು ತಿಳಿದುಬಂದಿದೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯ ಮುಂದೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಕೇವಲ ಎರಡು ದಿನಗಳ ಹಿಂದೆಯಷ್ಟೇ ಹೊಸಕೋಟೆ ಬಳಿ ನಡೆದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಆತಂಕ ಮೂಡಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ