ಬಿಕ್ಲು ಶಿವ ಕೊಲೆ ಪ್ರಕರಣ: ಆರೋಪಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಗೆ ಜಾಮೀನು ಮಂಜೂರು - Mahanayaka
12:16 PM Wednesday 29 - April 2026

ಬಿಕ್ಲು ಶಿವ ಕೊಲೆ ಪ್ರಕರಣ: ಆರೋಪಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಗೆ ಜಾಮೀನು ಮಂಜೂರು

12/03/2026

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಲುಕಿ ಜೈಲು ಪಾಲಾಗಿದ್ದ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಗುರುವಾರ ದೊಡ್ಡ ಸಮಾಧಾನ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, 2 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಅಷ್ಟೇ ಮೊತ್ತದ ಇಬ್ಬರು ಶ್ಯೂರಿಟಿ ನೀಡಬೇಕು ಮತ್ತು ಸಾಕ್ಷ್ಯಾಧಾರಗಳನ್ನು ನಾಶಪಡಿಸುವಂತಿಲ್ಲ,  ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು. ನ್ಯಾಯಾಲಯದ ಅನುಮತಿಯಿಲ್ಲದೆ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ಭಾರತಿ ನಗರದಲ್ಲಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಹಳೆಯ ಆಸ್ತಿ ವಿವಾದವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದರು. ಈ ಪ್ರಕರಣದ ಎಫ್‌ ಐಆರ್‌ ನಲ್ಲಿ ಬೈರತಿ ಬಸವರಾಜ್ ಅವರನ್ನು 5ನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ ಸ್ಟರ್ ಜಗದೀಶ್ ಅಲಿಯಾಸ್ ಜಗನನ್ನು ಪ್ರಮುಖ ಆರೋಪಿ ಎನ್ನಲಾಗಿದೆ.

ಕೊಲೆ ಪ್ರಕರಣದ ನಂತರ ಬಂಧನದ ಭೀತಿಯಿಂದ ಬೈರತಿ ಬಸವರಾಜ್ ಅವರು ತಲೆಮರೆಸಿಕೊಂಡಿದ್ದರು. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಎರಡೂ ತಿರಸ್ಕರಿಸಿದ್ದವು. ಈ ಹಿನ್ನೆಲೆಯಲ್ಲಿ, ಫೆಬ್ರವರಿ 13ರಂದು ಅವರು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಸುಮಾರು ಒಂದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕರಿಗೆ ಈಗ ಕೊನೆಗೂ ಜಾಮೀನು ಲಭಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ