ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ ಬಂಧನ - Mahanayaka
10:01 PM Thursday 12 - February 2026

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ ಬಂಧನ

bhairati basavaraj
12/02/2026

ಬೆಂಗಳೂರು: ರೌಡಿಶೀಟರ್ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಏನಿದು ಘಟನೆ? ಕಳೆದ ವರ್ಷ ಜುಲೈ 15 ರಂದು ಕಿತ್ತಗನೂರಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬಿಕ್ಲು ಶಿವನನ್ನು ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿತ್ತು. ಈ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಅವರ ಕೈವಾಡವಿದೆ ಎಂದು ಮೃತನ ತಾಯಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‌ ಐಆರ್‌ನಲ್ಲಿ ಶಾಸಕ ಭೈರತಿ ಬಸವರಾಜ್ ಅವರನ್ನು ಎ–5 (5ನೇ ಆರೋಪಿ) ಎಂದು ಹೆಸರಿಸಲಾಗಿತ್ತು.

ಬಂಧನದ ವಿವರ: ಬಂಧನ ಭೀತಿಯಿಂದಾಗಿ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಸಕರು, ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಅಹಮದಾಬಾದ್‌ನಿಂದ ಬೆಂಗಳೂರಿಗೆ ಮರಳುತ್ತಿದ್ದರು. ಗುರುವಾರ ಸಂಜೆ ಇಂಡಿಗೋ ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಹೊರಬರುತ್ತಿದ್ದಂತೆಯೇ ದೇವನಹಳ್ಳಿ ಎಸಿಪಿ ಹರ್ಷ ನೇತೃತ್ವದ ತಂಡ ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಪೊಲೀಸರು ಶಾಸಕರನ್ನು ನೇರವಾಗಿ ಸಿಐಡಿ ಕಚೇರಿಗೆ ಕರೆದೊಯ್ದಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ಸಿಐಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಪೊಲೀಸರು ಶಾಸಕರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆಯಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ