ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳಕ್ಕೆ ಬಿಜೆಪಿ—ಜೆಡಿಎಸ್ ವಿರೋಧ!
ಮಂಗಳೂರು: ಮೈಸೂರಿನ ಸಾಂಪ್ರದಾಯಿಕ ದಸರಾ ಉತ್ಸವದಲ್ಲಿ ಕಂಬಳ ಕ್ರೀಡೆಯನ್ನು ಸೇರಿಸುವ ಸರ್ಕಾರದ ಯೋಜನೆಗೆ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೈಸೂರು ದಸರಾದಲ್ಲಿ ಕಂಬಳ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ, ಮೈಸೂರು ಮತ್ತು ಕರಾವಳಿ ಭಾಗದ ಜನರ ಸಾಂಸ್ಕೃತಿಕ ಭಾವನೆಗಳಿಗೆ ಗೌರವ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾ ಪರಂಪರೆಗೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ” ಎಂದು ಹೇಳಿದ್ದಾರೆ.
“ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ಅದರ ದೈವಿಕ ಹಿನ್ನೆಲೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲು ಸಾಧ್ಯವಿಲ್ಲ. ಕರಾವಳಿ ಪ್ರದೇಶದ ಹಸಿರು ಮತ್ತು ನೀರಿನ ಸಂಗಮದ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಒಂದು ಧನ್ಯತೆಯ ಅನುಭವ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನೂ ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ದಸರಾ ವೇಳೆ ಕಂಬಳ ಆಯೋಜಿಸುವುದು ಸೂಕ್ತವಲ್ಲ. ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಬಿಟ್ಟು ಮೈಸೂರಿನ ಜನರ ಸಾಂಸ್ಕೃತಿಕ ಭಾವನೆಗಳಿಗೆ ಗೌರವ ನೀಡಬೇಕು” ಎಂದು ಒತ್ತಾಯಿಸಿದರು.
“ಕರಾವಳಿ ಭಾಗದ ವಿಶಿಷ್ಟ ಪರಂಪರೆಯಾದ ಕಂಬಳಕ್ಕೆ ತನ್ನದೇ ಆದ ಶ್ರೀಮಂತ ಇತಿಹಾಸವಿದೆ. ಅದನ್ನು ಕರಾವಳಿ ಜಿಲ್ಲೆಗಳಲ್ಲೇ ಅತ್ಯಂತ ಅದ್ದೂರಿಯಾಗಿ ಆಯೋಜಿಸಲಿ, ಅದಕ್ಕೆ ನಮ್ಮ ಸಂಪೂರ್ಣ ಸಹಕಾರವಿರಲಿದೆ. ಆದರೆ, ಕರಾವಳಿಯ ಪರಂಪರೆಯನ್ನು ಮೈಸೂರಿನ ದಸರಾ ಸಂಸ್ಕೃತಿಯೊಂದಿಗೆ ಬೆರೆಸುವುದು ಬೇಡ” ಎಂದು ವಿಜಯೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇದೇ ವಿಷಯವಾಗಿ ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ದಸರಾದಲ್ಲಿ ಕಂಬಳ ಆಯೋಜಿಸುವುದಕ್ಕೆ ತಮ್ಮ ತೀವ್ರ ವಿರೋಧವನ್ನು ದಾಖಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























