ನ.22ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ
ಉಡುಪಿ: ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆತಿಥ್ಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22ರಂದು ಬೆಳಿಗ್ಗೆ ಗಂಟೆ 10ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ.
ನ.21ರಂದು ಸಂಜೆ 6 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಹೇಳಿದರು.
ಅವರು ನ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವಿಶೇಷ ಕಾರ್ಯಕಾರಿಣಿ ಸಭೆಗೆ ರಾಜ್ಯ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ 39 ಸಂಘಟನಾತ್ಮಕ ಜಿಲ್ಲೆಗಳ ಯುವ ಮೋರ್ಚಾ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಅಪೇಕ್ಷಿತರಾಗಿದ್ದು, ಒಟ್ಟು 163 ಮಂದಿ ಭಾಗವಹಿಸಲಿದ್ದಾರೆ ಎಂದಿ ತಿಳಿಸಿದರು.
ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ ಎಂದರು.
ಕಾರ್ಯಕ್ರಮದ ಪೂರ್ವಭಾವಿಯಾಗಿ ನ.22ರ ಬೆಳಿಗ್ಗೆ ಗಂಟೆ 9ಕ್ಕೆ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್ ರವರನ್ನು ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಉಡುಪಿಯ ಜೋಡುಕಟ್ಟೆಯಲ್ಲಿ ಸ್ವಾಗತಿಸಿ, ಬೈಕ್ ರ್ಯಾಲಿ ಮೂಲಕ ಮಣಿಪಾಲದ ರಜತಾದ್ರಿಯ ವರೆಗೆ ಕರೆತರಲಾಗುವುದು. ಬಳಿಕ ರಜತಾದ್ರಿ ಮುಂಭಾಗದಲ್ಲಿರುವ ಡಾ.ವಿ.ಎಸ್. ಆಚಾರ್ಯ ರವರ ಪುತ್ಥಳಿಗೆ ಮಾಲಾರ್ಪಣೆಗೈದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದ ವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ ಎಂದು ತಿಳಿಸಿದರು.
ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ; ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್; ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಮ್. ಸುಕುಮಾರ್ ಶೆಟ್ಟಿ ಮತ್ತು ಪಕ್ಷದ ಮುಖಂಡರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಉದ್ಯಾವರ ಮತ್ತು ಅಭಿರಾಜ್ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka