ಮಂಡ್ಯದಲ್ಲಿ ಕಾವೇರಿ ನೀರು ಬಿಕ್ಕಟ್ಟು: ತೀವ್ರಗೊಂಡ ಪ್ರತಿಭಟನೆ ಮತ್ತು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ಸ್ಫೋಟಗೊಂಡಿದೆ. ವಿವಿಧ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿವೆ. ಇದರ ಬೆನ್ನಲ್ಲೇ ಕೆಆರ್ ಎಸ್ ಜಲಾಶಯಕ್ಕೆ ಬಿಜೆಪಿ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮಂಡ್ಯದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದ್ದು, ಮಂಡ್ಯ ಎಸ್ಪಿ ಡಾ.ವಿ.ಜೆ. ಶೋಭಾರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭದ್ರತೆಗಾಗಿ 2 ಮಂದಿ ಎಸ್ ಪಿ, 9 ಮಂದಿ ಡಿವೈಎಸ್ ಪಿ, 27 ಇನ್ಸ್ ಪೆಕ್ಟರ್ ಗಳು, 45 ಸಬ್ ಇನ್ಸ್ ಪೆಕ್ಟರ್ ಗಳು, 78 ಎಎಸ್ ಐ ಹಾಗೂ 1500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಮತ್ತು ರಾಜ್ಯ ಸರ್ಕಾರ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕುರ್ಚಿ ಜಗ್ಗಾಟದಲ್ಲಿ ಮುಳುಗಿರುವ ಸರ್ಕಾರಕ್ಕೆ ನೀರಿನ ಬಗ್ಗೆ ಕಾಳಜಿ ಇಲ್ಲ. ಈಗ ಎಲ್ಲ ನೀರನ್ನು ಬಿಟ್ಟು ಸಂಕಷ್ಟ ಸೃಷ್ಟಿಸಿಕೊಂಡು, ಸಚಿವ ಸಂಪುಟ ವಿಸ್ತರಣೆಯಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಿಳುನಾಡಿನ ವಾಟರ್ ಮ್ಯಾನ್ ರೀತಿಯಲ್ಲಿ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಇದೇ ವೇಳೆ ಮಾತನಾಡಿದ ಎಂಎಲ್‍ಸಿ ಸಿ.ಟಿ. ರವಿ, ಬಂಗಾರಪ್ಪನವರ ರೀತಿಯಲ್ಲಿ ನೀರು ಬಿಡದೆ ರಾಜ್ಯದ ಹಿತ ಕಾಯಬೇಕು ಮತ್ತು ನಿಮ್ಮದೇ ಮಿತ್ರ ಪಕ್ಷ ತಮಿಳುನಾಡಿನಲ್ಲೂ ಇದೆ, ಅವರಿಗೆ ಇಲ್ಲಿನ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಿ ಎಂದು ಒತ್ತಾಯಿಸಿದರು.
CWRC ಆದೇಶ ಖಂಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ವಿಜಯಸೇನೆ ರಾಜ್ಯಾಧ್ಯಕ್ಷ ದೀಪಕ್ ನೇತೃತ್ವದ ಕಾರ್ಯಕರ್ತರು ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ಜನ ನಾಯಗನ್ ಸಿನಿಮಾ ಪ್ರದರ್ಶನವಾಗುತ್ತಿದ್ದ ಮಂಡ್ಯದ ಗುರುಶ್ರೀ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಚಿತ್ರದ ಪೋಸ್ಟರ್‌ಗಳನ್ನು ಹರಿದುಹಾಕಿ ಆಕ್ರೋಶ ಹೊರಹಾಕಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/H1duNIQRfXnJcfQKWPzNqD
























