ಚಿಕ್ಕಮಗಳೂರು: ಮುಳ್ಳಯ್ಯನಗಿರಿ ರಸ್ತೆಯಲ್ಲಿ ಪ್ರವಾಸಿ ಜೀಪ್ ಪಲ್ಟಿ: ಆರು ಶಾಲಾ ಮಕ್ಕಳಿಗೆ ಗಾಯ
ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಇಂದು ಶಾಲಾ ಮಕ್ಕಳಿದ್ದ ಜೀಪ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಕೇರಳ ಮೂಲದ ಆರು ಶಾಲಾ ಮಕ್ಕಳಿಗೆ ಸಣ್ಣ–ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೇರಳದಿಂದ ಶಾಲಾ ಮಕ್ಕಳನ್ನು ಪ್ರವಾಸಕ್ಕಾಗಿ ಬಸ್ ಮೂಲಕ ಚಿಕ್ಕಮಗಳೂರಿಗೆ ಕರೆತರಲಾಗಿತ್ತು. ಟ್ರಾವೆಲ್ ಏಜೆನ್ಸಿ ಮುಖಾಂತರ ಬಂದಿದ್ದ ಈ ಪ್ರವಾಸಿ ತಂಡ ಮುಳ್ಳಯ್ಯನಗಿರಿ ವೀಕ್ಷಣೆಗೆ ತೆರಳಲು ಯೋಜಿಸಿತ್ತು. ಆದರೆ, ಮುಳ್ಳಯ್ಯನಗಿರಿಯ ಕಡಿದಾದ ಹಾದಿಯಲ್ಲಿ ದೊಡ್ಡ ಬಸ್‌ಗಳು ಹೋಗಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ, ಮಕ್ಕಳನ್ನು ಜೀಪ್‌ಗಳ ಮೂಲಕ ಕರೆದೊಯ್ಯಲಾಗುತ್ತಿತ್ತು.
ಮಕ್ಕಳನ್ನು ಕರೆದೊಯ್ಯುತ್ತಿದ್ದ ಜೀಪ್ ಚಾಲಕ ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದೇ ಈ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಜೀಪ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಘಟನೆ ನಡೆದ ಕೂಡಲೇ ಸ್ಥಳೀಯ ನಿವಾಸಿಗಳು ಮತ್ತು ಇತರ ಪ್ರವಾಸಿಗರು ರಕ್ಷಣೆಗೆ ಧಾವಿಸಿದ್ದಾರೆ. ಗಾಯಗೊಂಡ ಆರು ಮಕ್ಕಳನ್ನು ತಕ್ಷಣವೇ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























