ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಜೊತೆ ಅಸಭ್ಯ ವರ್ತನೆ: ಆರೋಪಿಯ ಬಂಧನ
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ 11 ವರ್ಷದ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಶಮೀರ್ ಎಂಬಾತನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ.
ಜೂನ್ 15ರ ಸಂಜೆ 5 ರಿಂದ 6 ಗಂಟೆಯ ಅವಧಿಯಲ್ಲಿ ಶೃಂಗೇರಿ ಪಟ್ಟಣದ ಕುಷನ್ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾಲಕಿಯು ತನ್ನ ಮನೆಯ ಬಳಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆರೋಪಿ ಶಮೀರ್ ಆಕೆಯನ್ನು ಹತ್ತಿರ ಕರೆದಿದ್ದಾನೆ. ಬಳಿಕ ಬಾಲಕಿಯ ಖಾಸಗಿ ಅಂಗವನ್ನು ಮುಟ್ಟಿ ವಿಕೃತವಾಗಿ ನಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ನಡೆದ ಸಮಯದಲ್ಲಿ ಬಾಲಕಿಯ ತಾಯಿ ಆಸ್ಪತ್ರೆಗೆ ತೆರಳಿದ್ದರು. ಅವರು ಮನೆಗೆ ವಾಪಸ್ ಬಂದ ನಂತರ, ಭಯಭೀತಳಾಗಿದ್ದ ಬಾಲಕಿಯು ತನಗಾದ ಕಹಿ ಅನುಭವವನ್ನು ತಾಯಿಗೆ ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾದ ತಾಯಿ ತಕ್ಷಣವೇ ಶೃಂಗೇರಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ತಕ್ಷಣವೇ ಕಾರ್ಯಪ್ರವೃತ್ತರಾದ ಶೃಂಗೇರಿ ಪೊಲೀಸರು ಆರೋಪಿ ಶಮೀರ್ ನನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75 (1)(i), ಪೋಕ್ಸೋ (POCSO) ಕಾಯ್ದೆಯ ಸೆಕ್ಷನ್ 8 ಹಾಗೂ ಎಸ್ ಸಿ/ಎಸ್ ಟಿ (SC/ST) ದೌರ್ಜನ್ಯ ತಡೆ ಕಾಯ್ದೆಯಡಿ ಎಫ್.ಐ.ಆರ್. (FIR) ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























