ಬೆಂಗಳೂರಿನಲ್ಲಿ CJP ಬೃಹತ್ ಪ್ರತಿಭಟನೆ: ಎಸ್ ಐಆರ್ ವಿರುದ್ಧ ಧ್ರುವ ರಾಠಿ, ಪ್ರಕಾಶ್ ರಾಜ್ ಕಿಡಿ
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಪ್ರತಿಭಟನೆಯಲ್ಲಿ ಪ್ರಸಿದ್ಧ ಯೂಟ್ಯೂಬರ್ ಧ್ರುವ ರಾಠಿ ಮತ್ತು ನಟ-ಕಾರ್ಯಕರ್ತ ಪ್ರಕಾಶ್ ರಾಜ್ ಭಾಗವಹಿಸಿ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ನಟ ಪ್ರಕಾಶ್ ರಾಜ್, ‘ಸಿಂಗಂ’ ಚಿತ್ರದ ಪ್ರಸಿದ್ಧ ಡೈಲಾಗ್ ಬಳಸಿ “ಆಲಿ ರೇ ಆಲಿ, ಗ್ಯಾನು, ಆತಾ ತುಝಿ ಬಾರೀ ಆಲಿ” ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವ್ಯಂಗ್ಯವಾಡಿದರು. “ನಮ್ಮ ಮತಗಳನ್ನು ಕಸಿದುಕೊಳ್ಳಲು ಅವರು ಯಾರು? ಇದು ಕೇವಲ ಮತ ಕಡಿತದ ಪ್ರಶ್ನೆಯಲ್ಲ, ಬದಲಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಡೆಯುತ್ತಿರುವ ನೇರ ದಾಳಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಆಯುಕ್ತರ ರಾಜೀನಾಮೆ ಮಾತ್ರವಲ್ಲದೆ, ಇಡೀ ಎಸ್ ಐಆರ್ (SIR) ಪ್ರಕ್ರಿಯೆಯನ್ನೇ ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಖ್ಯಾತ ಯೂಟ್ಯೂಬರ್ ಧ್ರುವ ರಾಠಿ, “ನಾನು ಇಲ್ಲಿ ಯಾವುದೇ ಸರ್ಕಾರ ಬದಲಾವಣೆಗಾಗಿ ಬಂದಿಲ್ಲ” ಎಂದು ಸ್ಪಷ್ಟಪಡಿಸಿದರು. ಚುನಾವಣಾ ಆಯೋಗದ (ECI) ಎಸ್ ಐಆರ್ ಪ್ರಕ್ರಿಯೆಯಲ್ಲಿ “ಶೂನ್ಯ ಪಾರದರ್ಶಕತೆ ಮತ್ತು ಶೂನ್ಯ ಜವಾಬ್ದಾರಿ” ಇದೆ ಎಂದು ತೀವ್ರವಾಗಿ ಟೀಕಿಸಿದರು.
ಸಿಜೆಪಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಎಸ್ ಐಆರ್ ಪ್ರಕ್ರಿಯೆಯಿಂದಾಗಿ ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಜನರು ‘ಜನತಾ ನ್ಯಾಯಾಲಯ’ದ ಮೂಲಕ ತಮ್ಮ ಅಳಲು ಹಾಗೂ ಅನುಭವಗಳನ್ನು ಹಂಚಿಕೊಂಡರು. ಇದರೊಂದಿಗೆ, ದೆಹಲಿ ಪೊಲೀಸ್ ಅಧಿಕಾರಿಯಿಂದ ದೌರ್ಜನ್ಯಕ್ಕೊಳಗಾದ ಮಹಿಳಾ ಪತ್ರಕರ್ತೆಯರಿಗೆ ಬೆಂಬಲ ಸೂಚಿಸುವ ಸಲುವಾಗಿ ‘ಚಪ್ಪಲಿ ಪ್ರತಿಭಟನೆ’ಯನ್ನು ಸಹ ಹಮ್ಮಿಕೊಳ್ಳಲಾಯಿತು.
ಈ ಪ್ರತಿಭಟನೆಯಲ್ಲಿ ವಿವಿಧ ಯುವ ಸಂಘಟನೆಗಳು, ನಾಗರಿಕ ಸಮಾಜದ ಪ್ರತಿನಿಧಿಗಳು ಹಾಗೂ ನೂರಾರು ಸಾರ್ವಜನಿಕರು ಪಾಲ್ಗೊಂಡು ಸಂವಿಧಾನ ಹಾಗೂ ಮತದಾನದ ಹಕ್ಕನ್ನು ರಕ್ಷಿಸಲು ಒಗ್ಗಟ್ಟಿನಿಂದ ಧ್ವನಿ ಎತ್ತಿದರು.

























