ಸಿಹಿಸುದ್ದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ ಅವರು, 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದರು.
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.