ಹೆಲಿಕಾಪ್ಟರ್ ಪ್ರಯಾಣಕ್ಕೆ ‘ಬೊಮ್ಮಾಯಿ ಕಾಲದಲ್ಲೇ 37 ಕೋಟಿ ರೂ. ಖರ್ಚು: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣದ ವೆಚ್ಚದ ಕುರಿತು ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಸಿಎಂ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಹೆಲಿಕಾಪ್ಟರ್ ಪ್ರಯಾಣಕ್ಕಾಗಿ ಬರೊಬ್ಬರಿ 37 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಅಂಕಿಅಂಶಗಳ ಸಮೇತ ತಿರುಗೇಟು ನೀಡಿದ್ದಾರೆ.
ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್‌ನ ‘ಮನ್ರೇಗಾ ಬಚಾವ್’ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಮೂಲಕ ತೆರಳಿದ್ದನ್ನು ಬಿಜೆಪಿ ನಾಯಕರು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, “ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಹೆಲಿಕಾಪ್ಟರ್ ಪ್ರಯಾಣಕ್ಕೆ 37 ಕೋಟಿ ರೂ. ಖರ್ಚು ಮಾಡಿದ್ದರು, ಆಗ ನಿಮ್ಮ ಪ್ರಶ್ನೆಗಳು ಎಲ್ಲಿ ಹೋಗಿದ್ದವು?” ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಯಾದವರಿಗೆ ಅನೇಕ ತುರ್ತು ಮತ್ತು ಪ್ರಮುಖ ಕಾರ್ಯಕ್ರಮಗಳಿರುತ್ತವೆ. ಸಮಯ ಉಳಿಸುವ ದೃಷ್ಟಿಯಿಂದ ಕೆಲವೊಮ್ಮೆ ಹೆಲಿಕಾಪ್ಟರ್ ಅಥವಾ ವಿಶೇಷ ವಿಮಾನದ ಪ್ರಯಾಣ ಅನಿವಾರ್ಯವಾಗುತ್ತದೆ ಎಂದು ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.
ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಮತ್ತು ದೇಶೀಯ ಪ್ರವಾಸಗಳ ವೆಚ್ಚವನ್ನೂ ಪ್ರಸ್ತಾಪಿಸಿದ ಸಿದ್ದರಾಮಯ್ಯ, “ಪ್ರಧಾನಿ ಮೋದಿ ಅವರ ಪ್ರವಾಸಗಳಿಗೆ ಇದುವರೆಗೆ ಸುಮಾರು 816 ಕೋಟಿ ರೂಪಾಯಿ ವೆಚ್ಚವಾಗಿದೆ. ಅದು ಸಾರ್ವಜನಿಕ ಖಜಾನೆಗೆ ಹೊರೆಯಲ್ಲವೇ?” ಎಂದು ಮರುಪ್ರಶ್ನೆ ಹಾಕಿದರು.
ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಜಾಪ್ರಭುತ್ವದಲ್ಲಿ ಟೀಕೆ ಮಾಡಲು ಎಲ್ಲರಿಗೂ ಹಕ್ಕಿದೆ, ಆದರೆ ಅದು ರಚನಾತ್ಮಕವಾಗಿ ಮತ್ತು ಸತ್ಯಾಂಶದಿಂದ ಕೂಡಿರಲಿ ಎಂದು ಕಿವಿಮಾತು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























