ಜಾಪ್ರಭುತ್ವದ ಕಗ್ಗೊಲೆ: ರಾಹುಲ್, ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಕಾಂಗ್ರೆಸ್ ಮುಖಂಡ ದಿನೇಶ್ ಮುಳೂರು ಖಂಡನೆ
ಮಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ದಿನೇಶ್ ಮುಳೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ದಮನಕಾರಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ಧೋರಣೆಯನ್ನು ಖಂಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಜನರ ಪರವಾಗಿ ಧ್ವನಿ ಎತ್ತುವ ವಿರೋಧ ಪಕ್ಷದ ನಾಯಕರನ್ನು ಬಲಪ್ರಯೋಗದಿಂದ ಹತ್ತಿಕ್ಕಲು ಹೊರಟಿರುವ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಆತ್ಮಕ್ಕೇ ಅವಮಾನ ಎಸಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಶ್ನೆ ಕೇಳುವುದು ಅಪರಾಧವಲ್ಲ, ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಪ್ರತಿಪಕ್ಷದ ಆಡಳಿತಾತ್ಮಕ ಹಾಗೂ ನೈತಿಕ ಕರ್ತವ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.
ಸಂವಿಧಾನವು ಪ್ರಜೆಗಳಿಗೆ ನೀಡಿರುವ ಮೂಲಭೂತ ಹಕ್ಕುಗಳಾದ ಮಾತಿನ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕಸಿದುಕೊಳ್ಳಲು ಹೊರಟಿರುವ ಪ್ರಯತ್ನವನ್ನು ದೇಶದ ಪ್ರಜ್ಞಾವಂತ ಜನತೆ ಎಂದಿಗೂ ಒಪ್ಪುವುದಿಲ್ಲ. ಅಧಿಕಾರದ ಬಲದಿಂದ ವಿರೋಧದ ಧ್ವನಿಯನ್ನು ಅಡಗಿಸಲು ಹೊರಟಿರುವುದು ನಮ್ಮ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಬಹುದೊಡ್ಡ ಧಕ್ಕೆ ತಂದಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಿರುದ್ಧ ಕೈಗೊಂಡಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳಬೇಕು. ದೇಶದಲ್ಲಿ ದಮನಕಾರಿ ರಾಜಕಾರಣವನ್ನು ಕೊನೆಗೊಳಿಸಿ, ಸಂವಿಧಾನಿಕ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಬೇಕೆಂದು ದಿನೇಶ್ ಮುಳೂರು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























