ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ: ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರ
ಬೆಂಗಳೂರು: “ರಾಮಲಿಂಗಾರೆಡ್ಡಿಯವರು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ನಾವಿಬ್ಬರೂ ಕುಳಿತು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದ್ದು, ಹಿರಿಯ ನಾಯಕ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಸಿಎಂ ಮಾತನಾಡಿದರು.
ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಅವರು ನನ್ನ ಸಹೋದ್ಯೋಗಿ ಮತ್ತು ಪಕ್ಷದ ಹಿರಿಯ ನಾಯಕರು. ತಮಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗುವುದಿಲ್ಲ, ಬೇರೆ ಖಾತೆ ನೀಡಬೇಕು ಎಂಬ ಆಪೇಕ್ಷೆ ಅವರಿಗಿದೆ. ಈ ಬಗ್ಗೆ ನಾನು ಅವರ ಜೊತೆ ಖುದ್ದಾಗಿ ಚರ್ಚಿಸುತ್ತೇನೆ. ನಂತರ ಕ್ಯಾಬಿನೆಟ್ ನಲ್ಲಿಯೂ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ,” ಎಂದರು.
ತಮಗೆ ಇಷ್ಟವಿಲ್ಲದ ಖಾತೆ ನೀಡಿದ್ದಕ್ಕೆ ಹಾಗೂ ಕೊಟ್ಟ ಮಾತು ತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾರೆಡ್ಡಿ ಅವರು, ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲೇ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ, “ನನ್ನ ನಿರ್ಧಾರ ಅಚಲವಾಗಿದ್ದು, ಯಾರ ಮನವೊಲಿಕೆಗೂ ನಾನು ಬಗ್ಗುವುದಿಲ್ಲ. ಸದ್ಯಕ್ಕೆ ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ,” ಎಂದು ಹಠ ಹಿಡಿದಿದ್ದಾರೆ.
ಅಧಿಕಾರ ವಹಿಸಿಕೊಂಡ ಆರಂಭದಲ್ಲೇ ಹಿರಿಯ ನಾಯಕರೊಬ್ಬರು ಬಂಡಾಯವೆದ್ದಿರುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























