ದಕ್ಷಿಣ ಕನ್ನಡ: ಭಾರೀ ಮಳೆ ಮುನ್ಸೂಚನೆ: ಜುಲೈ 24 ರಂದು ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ

rain
24/07/2026

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನಿಸರ್ಗ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 24, 2026 ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಈ ಆದೇಶದನ್ವಯ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, 12ನೇ ತರಗತಿವರೆಗಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳು, ಹಾಗೂ ಎಲ್ಲಾ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ರಜೆ ಇರಲಿದೆ. ವಸತಿ ಶಾಲೆಗಳು ಮತ್ತು ವಸತಿ ಕಾಲೇಜುಗಳಿಗೂ ಈ ರಜೆ ಅನ್ವಯವಾಗುತ್ತದೆ. ಆದೇಶವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರತೀರಗಳಿಗೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಅಥವಾ ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಚಾಚೂ ತಪ್ಪದೇ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕಿನಲ್ಲಿಯೂ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು.

ಪ್ರಾಕೃತಿಕ ವಿಕೋಪ ಸಂಬಂಧಿತ ಯಾವುದೇ ತುರ್ತು ಸಮಸ್ಯೆಗಳು ಎದುರಾದಲ್ಲಿ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0824-2442590 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version