ದೆಹಲಿ: ಸಿಜೆಪಿ ‘ಚಲೋ ಸಂಸದ್’ ಪ್ರತಿಭಟನೆ; ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

cjp
20/07/2026

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಸಂಸತ್ ಭವನದ ಕಡೆಗೆ ಮುನ್ನಡೆಯಲು ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಂತರ್ ಮಂತರ್ ಬಳಿ ಭಾರಿ ಘರ್ಷಣೆ ಸಂಭವಿಸಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿ ಲಾಠಿ ಪ್ರಹಾರ ನಡೆಸಿದ್ದಾರೆ.

ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನವದೆಹಲಿ ಜಿಲ್ಲಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಜಂತರ್ ಮಂತರ್‌ ನಲ್ಲಿ ಪೂರ್ವಾನುಮತಿ ಪಡೆದು ಪ್ರತಿಭಟನೆ ನಡೆಸಲು ಮಾತ್ರ ಅವಕಾಶ ನೀಡಲಾಗಿತ್ತು. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿತ್ತು. ಆದರೆ, ‘ಚಲೋ ಸಂಸದ್’ ಮೆರವಣಿಗೆಗೆ ಸಿಜೆಪಿ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರಕಾಶ್ ರಾಜ್, ಚಂದ್ರಶೇಖರ್ ಆಜಾದ್ ಬೆಂಬಲ:

ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಚಂದ್ರಶೇಖರ್ ಆಜಾದ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರಿಗೆ ಬೆಂಬಲ ಸೂಚಿಸಿದರು. “ಯುವಕರ ನೋವು ನನಗೆ ಅರ್ಥವಾಗುತ್ತದೆ. ಅವರ ಪರವಾಗಿ ನಾನು ಸಂಸತ್ತಿನಲ್ಲೂ ಧ್ವನಿ ಎತ್ತುತ್ತೇನೆ” ಎಂದು ಅವರು ಹೇಳಿದರು. ಖ್ಯಾತ ನಟ ಪ್ರಕಾಶ್ ರಾಜ್ ಕೂಡ ಪ್ರತಿಭಟನಾ ಸ್ಥಳದಲ್ಲಿದ್ದು ಹೋರಾಟಕ್ಕೆ ಸಾಥ್ ನೀಡಿದರು.

ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ:

ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೋರಾಟಗಾರ ಸೋನಮ್ ವಾಂಗ್ಚುಕ್ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಭಾಗವಾಗಿ ಈ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಸದ್ಯ ಆರೋಗ್ಯ ಕ್ಷೀಣಿಸಿದ ಕಾರಣ ವಾಂಗ್ಚುಕ್ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. “ಪರೀಕ್ಷಾ ಅಕ್ರಮಗಳ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು ಅಥವಾ ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸುವ ಭರವಸೆ ಸಿಕ್ಕರೆ ಉಪವಾಸ ಕೈಬಿಡುವುದಾಗಿ” ಆಸ್ಪತ್ರೆಯಿಂದಲೇ ವಾಂಗ್ಚುಕ್ ಸಂದೇಶ ರವಾನಿಸಿದ್ದಾರೆ.

ಪರೀಕ್ಷಾ ಸುಧಾರಣೆಗಳ ಕುರಿತು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ, ಆದರೆ ಆಡಳಿತ ಮಂಡಳಿಯಿಂದ ನಮಗೆ ಇನ್ನೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version