ಪಿಎಂ, ಸಿಎಂ ಮಾಡಿದ್ರೂ ದೇವೇಗೌಡರು–ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇರಲಿಲ್ಲ: ಡಿ.ಕೆ. ಶಿವಕುಮಾರ್ ವಾಗ್ದಾಳಿ
ನವದೆಹಲಿ: ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ದೇವೇಗೌಡರನ್ನು ಪ್ರಧಾನಿಯನ್ನಾಗಿ ಮತ್ತು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ವಿಶಾಲ ಹೃದಯ ಅವರಿಗೆ ಇರಲಿಲ್ಲ” ಎಂದು ಅವರು ಟೀಕಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್–ಜೆಡಿಎಸ್ ಮೈತ್ರಿ ಬಗ್ಗೆ ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಜಾತ್ಯತೀತ ತತ್ವವನ್ನು ಉಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ದೇವೇಗೌಡರಿಗೆ ಪ್ರಧಾನಿ ಪಟ್ಟ ಹಾಗೂ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿತ್ತು. ನಮ್ಮ ಪಕ್ಷ ಅವರಿಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿತ್ತು ಎಂದು ಡಿ.ಕೆ. ಶಿವಕುಮಾರ್ ಸ್ಮರಿಸಿದರು.
ತಮಗೆ ಸಿಕ್ಕ ಸ್ಥಾನಮಾನಗಳನ್ನು ನಿಭಾಯಿಸುವ ಸಾಮರ್ಥ್ಯ ಮತ್ತು ಧೈರ್ಯ ಅವರಿಬ್ಬರಿಗೂ ಇರಲಿಲ್ಲ. ಮೈತ್ರಿ ಸರ್ಕಾರವನ್ನು ತಾಳ್ಮೆ ಮತ್ತು ಸಂತೋಷದಿಂದ ಮುನ್ನಡೆಸುವ ಜವಾಬ್ದಾರಿ ಅವರ ಮೇಲಿತ್ತು. ಆದರೆ ಅವರು ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವಲ್ಲಿ ವಿಫಲರಾದರು ಎಂದು ಡಿ.ಕೆ.ಶಿ ಆರೋಪಿಸಿದರಲ್ಲದೇ ಮೈತ್ರಿಯನ್ನು ಸರಿಯಾಗಿ ನಿಭಾಯಿಸದ ಕಾರಣಕ್ಕಾಗಿಯೇ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಅವರು ವಿಶ್ಲೇಷಿಸಿದರು.
ಇದೇ ಸಂದರ್ಭದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಗ್ಗೆ ಮಾತನಾಡಿದ ಅವರು, ಮುಂದಿನ ಎರಡು-ಮೂರು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಹೈಕಮಾಂಡ್ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























