ಧೋನಿ ವಿರುದ್ಧ ದುರುದ್ದೇಶಪೂರಿತ ಹೇಳಿಕೆ: ನಿವೃತ್ತ ಐಪಿಎಸ್ ಅಧಿಕಾರಿಗೆ ಜೈಲು ಶಿಕ್ಷೆ

16/12/2023

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಅವರಿ​ಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

2013ರ ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿ ಮಹೇಂದ್ರ ಸಿಂಗ್ ಧೋನಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುಂದರ್ ಮತ್ತು ಮೋಹನ್ ಅವರಿದ್ದ ವಿಭಾಗೀಯ ಪೀಠವು ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಂಪತ್ ಕುಮಾರ್ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಿವೃತ್ತ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಮತ್ತು ಇತರರು 2013ರ ಐಪಿಎಲ್‌ನಲ್ಲಿ ನಾನು ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದೇನೆ ಎಂದು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಧೋನಿ ಆರೋಪಿಸಿದ್ದಾರೆ. ತಮ್ಮ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡದಂತೆ ಅಥವಾ ಪ್ರಕಟಿಸದಂತೆ ತಡೆಯಬೇಕೆಂದು ಕೋರ್ಟ್ ಗೆ ಮನವಿ ಮಾಡಿದ್ದರು. ಬಳಿಕ ಕೋರ್ಟ್ ಧೋನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದಕ್ಕೆ ತಡೆ ನೀಡಿತ್ತು.

ಆದರೆ ಬಳಿಕವೂ ನಿವೃತ್ತ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಧೋನಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​ ತೀರ್ಪು ನೀಡಿದೆ.

ಇತ್ತೀಚಿನ ಸುದ್ದಿ

Exit mobile version