3 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಆಕಾಂಕ್ಷಿಗಳಿಗೆ ನಿರಾಸೆ: ಇಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂದು ಕಾಂಗ್ರೆಸ್ ನ ಕೆಲವು ನಾಯಕರು ಇತ್ತೀಚೆಗೆ ಸಭೆಗಳ ಮೇಲೆ ಸಭೆಗಳನ್ನು ನಡೆಸಿ ಸುದ್ದಿಗಳಾಗಿದ್ದರು. ಇದೀಗ ಉಪಮುಖ್ಯಮಂತ್ರಿ ಸ್ಥಾನಾಕಾಂಕ್ಷಿಗಳಾಗಿದ್ದ ನಾಯಕರ ಆಸೆಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರೆರಚಿದೆ.
ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ ನೀವು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೇ ಕೇಳಿ ಎಂದು ಅವರು ಹೇಳಿದರು.
ಇದೆಲ್ಲಾ ಉಹಾಪೋಹ. ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರ ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆಗೆ, ಸಮಸ್ಯೆಗಳ ಕಡೆಗೆ ಗಮನ ಕೊಡಬೇಕು. ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವರೆಗೆ ಇಂತಹದಕ್ಕೆ ಅವಕಾಶ ಕೊಡಬಾರದು ಎಂದು ಉಪಮುಖ್ಯಮಂತ್ರಿ ಸ್ಥಾನಾಕಾಂಕ್ಷಿಗಳಿಗೆ ಖರ್ಗೆ ಕಿವಿಮಾತು ಹೇಳಿದ್ದಾರೆ.
ಮೂರು ಉಪಮುಖ್ಯಮಂತ್ರಿಗಳ ಬೇಡಿಕೆ ವಿಚಾರವಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ, ಡಿಸಿಎಂ ಹುದ್ದೆಗಳಿಗೆ ಬೇಡಿಕೆ ಇಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿಕೆ ನೀಡಿದ್ದರು.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಠಿಸುವುದನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು, ವಿವಿಧ ಸಮುದಾಯಗಳಿಗೆ ಡಿಸಿಎಂ ಹುದ್ದೆಗಳನ್ನು ಹಂಚಿಕೆ ಮಾಡುವುದು ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಬಲ ನೀಡಲಿದೆ ಎಂದು ಹೇಳಿದ್ದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿ ಪ್ರವಾಸದ ವೇಳೆ ಈಗಾಗಲೇ ಮೂರು ಡಿಸಿಎಂ ಹುದ್ದೆಗಳ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಚ್ಚುವರಿ ಉಪ ಮುಖ್ಯಮಂತ್ರಿಗಳನ್ನು ಸೃಷ್ಟಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.