ಭೀಕರ ರಸ್ತೆ ಅಪಘಾತ: ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ತ್ರಿಶೂರ್ (ಕೇರಳ): ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಿಂಡಿಗಲ್ ನ ಪಿಎಸ್ ಎನ್‌ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 11:42ರ ಸುಮಾರಿಗೆ ತಮಿಳುನಾಡು ನೋಂದಣಿಯ ಕಾರು ನಿಯಂತ್ರಣ ತಪ್ಪಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಸರಕು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮುಂಭಾಗವು ಲಾರಿಯ ಅಡಿಗೆ ಸಿಲುಕಿಕೊಂಡಿದೆ. ಜೋರಾದ ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ವಾಹನವನ್ನು ಕತ್ತರಿಸಬೇಕಾಯಿತು. ಆದರೆ ಗಾಯಗೊಂಡಿದ್ದ ಎಂಟು ಮಂದಿಯೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು.
ಮೃತರನ್ನು ತಮಿಳುನಾಡಿನ 20 ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇವರು ಕೇರಳಕ್ಕೆ ರಜಾ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ. ಮೃತರ ಪೈಕಿ ಸೇಲಂ ಮೂಲದ ವಿಶ್ವ, ದಿಂಡಿಗಲ್‌ನ ಸೂರ್ಯ ಹಾಗೂ ಯುವ ಸಂಜಿತ್, ಮಧುರೈನ ಸಂತೋಷ್ ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ನಿವಾಸಿಗಳು, ಹೆದ್ದಾರಿಯಲ್ಲಿ ಅಸಮರ್ಪಕ ಬೀದಿ ದೀಪಗಳು ಮತ್ತು ಎಚ್ಚರಿಕೆ ಫಲಕಗಳು ಇಲ್ಲದಿರುವುದೇ ಈ ದುರಂತಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ. ಕೈಪಮಂಗಲಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ವಿದ್ಯಾರ್ಥಿಗಳ ಅಕಾಲಿಕ ಸಾವಿನಿಂದಾಗಿ ಅವರ ಕುಟುಂಬಗಳು ಮತ್ತು ಕಾಲೇಜಿನಲ್ಲಿ ಶೋಕ ಮಡುಗಟ್ಟಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























